ಬೆಂಗಳೂರು: ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಆರಂಭಿಕ ಹಂತದಲ್ಲಿಯೇ ರೋಗವನ್ನು ಗುರುತಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆ ವೈದ್ಯರು ತಿಳಿಸಿದರು.
ಆಸ್ಪತ್ರೆಯು ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಪಿಂಕ್ ವುಮೆನ್ಸ್’ ಬೈಕಥಾನ್‌ನಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ವೇಳೆ ಮಾತನಾಡಿದ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ‘ಬದಲಾದ ಜೀವನಶೈಲಿ, ಪಾಶ್ಚಾತ್ಯ ಆಹಾರ ಪದ್ಧತಿ ಸೇರಿ ವಿವಿಧ ಕಾರಣಗಳಿಂದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹೆಚ್ಚಳವಾಗುತ್ತಿದೆ. ಆದ್ದರಿಂದ ರೋಗದ ಬಗ್ಗೆ ಸುತ್ತಮುತ್ತಲಿನ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಅರಿವು ಮೂಡಿಸಬೇಕು. ರೋಗವನ್ನು ಶೀಘ್ರವಾಗಿ ಪತ್ತೆ ಮಾಡಿ, ಸಕಾಲದಲ್ಲಿ ಚಿಕಿತ್ಸೆ ಒದಗಿಸಿದರೆ ಸುಲಭವಾಗಿ ವಾಸಿ ಮಾಡಬಹುದಾಗಿದೆ’ ಎಂದು ಅಭಿಪ್ರಾಯಪಟ್ಟರು.
ಕ್ಯಾನ್ಸರ್ ತಜ್ಞೆ ಡಾ. ರೋಶನಿ ದಾಸ್‌ಗುಪ್ತ, ‘ಮಹಿಳೆಯರು ಸ್ತನ ಕ್ಯಾನ್ಸರ್ ಲಕ್ಷಣದ ಬಗ್ಗೆ ತಿಳಿದಲ್ಲಿ ಮಾತ್ರ ರೋಗ ಉಲ್ಬಣ ತಡೆ ಸಾಧ್ಯ. ಆದ್ದರಿಂದ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಹೆಚ್ಚಬೇಕು. ಮಹಿಳೆಯರು ಆರೋಗ್ಯ ಕಡೆಗಣಿಸದೆ, ರೋಗ ಲಕ್ಷಣಗಳು ಕಂಡುಬಂದಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದರು.
ಡಾ. ಮಹೇಶ್ ಬಂಡೇಮೆಗಲ್, ‘ನಿರಂತರ ತಪಾಸಣೆ ಮತ್ತು ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಯಿಂದ ಮಾತ್ರ ಕ್ಯಾನ್ಸರ್ ತಡೆಗಟ್ಟಲು ಸಾಧ್ಯ’ ಎಂದು ಹೇಳಿದರು.
ಕೆ.ಆರ್. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಯಿಂದ ಬೆಳಿಗ್ಗೆ 7 ಗಂಟೆಗೆ ಪ್ರಾರಂಭಗೊಂಡ ಬೈಕಥಾನ್, ಎಂ.ಜಿ. ರಸ್ತೆ, ಟ್ರಿನಿಟಿ ವೃತ್ತ, ವಿಧಾನಸೌಧದ ಮುಂಭಾಗದಿಂದ ಸಾಗಿತು. 180ಕ್ಕೂ ಹೆಚ್ಚು ಮಹಿಳೆಯರು ಬೈಕಥಾನ್‌ನಲ್ಲಿ ಪಾಲ್ಗೊಂಡು, ಜಾಗೃತಿ ಮೂಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.