ಬೆಂಗಳೂರು: ‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ಸಂಬಂಧಿಸಿದಂತೆ ಸರ್ಕಾರವು ಜನರ ಅಭಿಪ್ರಾಯ ಸಂಗ್ರಹಿಸುವ ಕೆಲಸ ಮಾಡಲಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ನಡೆ’ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ವೈ. ಅಂಬೇಡ್ಕರ್ ಬೇಸರ ವ್ಯಕ್ತಪಡಿಸಿದರು.
ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ವಿರೋಧಿಸಿ ದಲಿತ ಶೋಷಿತ ಸಂಘರ್ಷ ಸಮಿತಿಯು ನಗರದಲ್ಲಿ ಬುಧವಾರ ಆಯೋಜಿಸಿದ್ದ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
‘ಸಿಎಎ ಜಾರಿಯಿಂದ ದಾಖಲೆಗಳನ್ನು ಹೊಂದಿರದ ಹಿಂದುಗಳು ಕೂಡ ಸಂಕಷ್ಟಕ್ಕೆ ಸಿಲುಕುತ್ತಾರೆ. ಜನತೆಗೆ ಸಂಬಂಧಿಸಿದ ನಿರ್ಣಯಗಳನ್ನು ಕೈಗೊಳ್ಳುವ ಮೊದಲು ಸರ್ಕಾರ ಚರ್ಚೆಗೆ ಅವಕಾಶ ನೀಡಬೇಕು. ಆದರೆ, ಸರ್ಕಾರವು ಪ್ರಜಾಪ್ರಭುತ್ವದ ಆಶಯದ ಅನುಸಾರ ನಡೆದುಕೊಳ್ಳುತ್ತಿಲ್ಲ’ ಎಂದರು.
‘ಅಸ್ಸಾಂನಲ್ಲಿ 14 ಲಕ್ಷಕ್ಕೂ ಹೆಚ್ಚು ಹಿಂದುಗಳು ಬಂಧನ ಶಿಬಿರಗಳಲ್ಲಿದ್ದಾರೆ. ಪುರಾವೆಗಳನ್ನು ತಯಾರಿಸಲು ವಿಫಲರಾದವರನ್ನು ಈ ಶಿಬಿರಗಳಲ್ಲಿ ಇರಿಸಲಾಗುತ್ತದೆ.ಇದು ಕೇವಲ ಮುಸ್ಲಿಮರನ್ನು ಗುರಿಯಾಗಿಸಿ ಜಾರಿ ಮಾಡಿರುವ ಕಾಯ್ದೆಯಲ್ಲ. ಕೆಲ ಹಿಂದುಗಳನ್ನು ಸಂಕಷ್ಟಕ್ಕೆ ನೂಕುವ ಸಂಚಾಗಿದೆ.ಸಂವಿಧಾನದ ಮೇಲೆ ಒಂದು ರೀತಿಯ ಆಕ್ರಮಣ ನಡೆಯುತ್ತಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಗಳಿಗೆ ವಿರುದ್ಧವಾಗಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.