ಬೆಂಗಳೂರು: ಕಾವೇರಿ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಮೌನ ಧರಣಿ ಬುಧವಾರವೂ ಮುಂದುವರಿದಿತ್ತು.
ಕಾವೇರಿ ನೀರಿನ ಸಮಸ್ಯೆಗೆ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಮೂರು ಪಕ್ಷಗಳೂ ಕಾರಣ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ದೂರಿದರು.
‘ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಾದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕುಡಿಯಲು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿ ಇದ್ದು ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ತಕ್ಷಣ ನಿಲ್ಲಿಸಬೇಕು’ ಎಂದು ಆಗ್ರಹಿಸಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಸಮಸ್ಯೆಯನ್ನು ಸರಿಪಡಿಸಲು ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿಯ ಕೊರತೆಯಿದೆ. ಸಮಸ್ಯೆ ಬಗೆಹರಿಸಲು ವಿಫಲವಾಗಿದೆ ಎಂದು ಆಪಾದಿಸಿದರು.
ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ ಸಹವಾನಿ, ಬೆಂಗಳೂರು ನಗರ ಅಧ್ಯಕ್ಷ ಸತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.