ಬೆಂಗಳೂರು: ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ರಾಜ್ಯದಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಸಿಆರ್) ನಿಯಮ ಜಾರಿಗೊಳಿಸಲು ಸಿದ್ಧತೆ ನಡೆಯುತ್ತಿರುವ ಮಧ್ಯೆಯೇ, ಅಕ್ರಮ ನಿವಾಸಿಗಳ ಕಾರ್ಯಾಚರಣೆಗಿಳಿದಿರುವ ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು 60 ಬಾಂಗ್ಲಾ ಅಕ್ರಮ ವಲಸಿಗರನ್ನು ಬಂಧಿಸಿದ್ದಾರೆ.
ವಿದೇಶಿಯರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ನಗರದ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್‌ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಅನಧಿಕೃತವಾಗಿ ವಾಸಿಸುತ್ತಿದ್ದ 29 ಪುರುಷರು, 22 ಮಹಿಳೆಯರು ಮತ್ತು 9 ಹುಡುಗಿಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲರೂ ಬಾಂಗ್ಲಾ ಅಕ್ರಮ ವಲಸಿಗರು ಎನ್ನುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ವಿದ್ಯಾರ್ಥಿ ವೀಸಾ, ಪ್ರವಾಸಿ ವೀಸಾದಲ್ಲಿ ದೇಶಕ್ಕೆ ಬಂದು, ಅವಧಿ ಮುಗಿದರೂ ವಾಪಸು ಹೋಗದೆ ಅಕ್ರಮವಾಗಿ ನೆಲೆಸಿದ್ದ ಆಫ್ರಿಕಾ ದೇಶದ ಏಳು ಮಂದಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಅವರನ್ನು ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಓ) ಮೂಲಕ ಅವರ ದೇಶಕ್ಕೆ ಕಳುಹಿಸುವ ಪ್ರಕ್ರಿಯೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.
ಅಕ್ರಮವಾಗಿ ನೆಲೆಸಿರುವ ವಿದೇಶಿಯರನ್ನು ಪತ್ತೆಹಚ್ಚಿ, ಅವರನ್ನು ಅವರವರ ದೇಶಗಳಿಗೆ ಮರಳಿ ಕಳುಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಗಡಿಪಾರು ಮಾಡುವವರೆಗೂ ಇರಿಸಲು ನೆಲಮಂಗಲದ ಸಮೀಪ ವಿದೇಶೀಯರ ಬಂಧನ ಕೇಂದ್ರಕ್ಕೆ ಚಾಲನೆ ನೀಡಲು ಕೂಡಾ ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ನೆಲಮಂಗಲ ಹತ್ತಿರದ ಸೊಂಡೆಕೊಪ್ಪದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯವನ್ನು ಈ ಕೇಂದ್ರವಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.