ADVERTISEMENT

ಸ್ಫೋಟಕ್ಕೆ ಸಂಚು: ಶಂಕಿತರು ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2023, 1:28 IST
Last Updated 6 ಆಗಸ್ಟ್ 2023, 1:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದ ಆರು ಶಂಕಿತ ಉಗ್ರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸುಲ್ತಾನ್‌ಪಾಳ್ಯದ ಮನೆಯೊಂದರ ಮೇಲೆ ಜುಲೈ 1ರಂದು ದಾಳಿ ಮಾಡಿದ್ದ ಸಿಸಿಬಿ ಪೊಲೀಸರು, ಶಂಕಿತರಾದ ಸೈಯದ್ ಸುಹೇಲ್ ಖಾನ್, ಜಾಹೀದ್ ತಬ್ರೇಜ್, ಸೈಯದ್ ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ, ಹಾಗೂ ಮೊಹಮ್ಮದ್ ಉಮರ್‌ನನ್ನು ಬಂಧಿಸಿದ್ದರು. ಇವರ ಹೇಳಿಕೆ ಆಧರಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಬಾಂಬ್‌ ಸ್ಫೋಟ ಪ್ರಕರಣ ಅಪರಾಧಿ ಟಿ. ನಾಸೀರ್‌ನನ್ನು ಕಸ್ಟಡಿಗೆ ಪಡೆದಿದ್ದರು.

ಆರು ಶಂಕಿತ ಉಗ್ರರ ಕಸ್ಟಡಿ ಅವಧಿ ಮುಗಿದಿದ್ದರಿಂದ ಅವರೆಲ್ಲರನ್ನೂ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಶಂಕಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ADVERTISEMENT

ತನಿಖೆ ಮುಂದುವರಿಕೆ: ‘ಆರು ಶಂಕಿತರನ್ನು ವಿಚಾರಣೆ ನಡೆಸಿ ಸಾಕಷ್ಟು ಮಾಹಿತಿ ಕಲೆಹಾಕಲಾಗಿದೆ. ಅದರನ್ವಯ ತನಿಖೆ ಮುಂದುವರಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಪ್ರಕರಣದಲ್ಲಿ ಇನ್ನು ಹಲವರು ಭಾಗಿಯಾಗಿರುವ ಶಂಕೆ ಇದೆ. ಹಣದ ವಹಿವಾಟು ನಡೆದಿದ್ದು, ಈ ಬಗ್ಗೆಯೂ ಮಾಹಿತಿ ಪಡೆಯಬೇಕಿದೆ’ ಎಂದು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.