ADVERTISEMENT

ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದರಸಾ ತೆರವಿಗೆ ಕೇಂದ್ರದ ಮನವಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2024, 23:45 IST
Last Updated 13 ನವೆಂಬರ್ 2024, 23:45 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಶ್ರೀರಂಗಪಟ್ಟಣದ ಜುಮ್ಮಾ ಮಸೀದಿಯಲ್ಲಿರುವ ಮದರಸಾ ತೆರವಿಗೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಕೇಂದ್ರ ಸರ್ಕಾರ, ಹೈಕೋರ್ಟ್‌ಗೆ ಮನವಿ ಮಾಡಿದೆ.

‘ಮಸೀದಿಯಲ್ಲಿ ಅಕ್ರಮವಾಗಿ ಮದರಸಾ ಚಟುವಟಿಕೆ ನಡೆಯುತ್ತಿದೆ’ ಎಂದು ಆರೋಪಿಸಿ ಕನಕಪುರ ತಾಲ್ಲೂಕು ಕಬ್ಬಾಳು ಗ್ರಾಮದ ಅಭಿಷೇಕ್‌ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಅರವಿಂದ್‌ ಕಾಮತ್‌, ‘ಜುಮ್ಮಾ ಮಸೀದಿ ಯನ್ನು 1951ರಲ್ಲೇ ಸಂರಕ್ಷಿತ ಸ್ಮಾರಕ ಎಂದು ಘೋಷಿಸಲಾಗಿದೆ. ಆದರೆ, ಅಲ್ಲಿ ಕಾನೂನು ಬಾಹಿರ ಮದರಸಾ ಚಟುವಟಿಕೆಗಳು ನಡೆಯುತ್ತಿವೆ. ಈ ಚಟುವಟಿಕೆಗಳನ್ನು ತಡೆಯಲು ಹೋದರೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಉಂಟಾಗಲಿದೆ ಎಂಬ ಕಾರಣಕ್ಕೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಮಸೀದಿಯಲ್ಲಿನ ಮದರಸಾ ತೆರವು ಮಾಡಲು ಜಿಲ್ಲಾಧಿ ಕಾರಿಗೆ ಅಗತ್ಯ ನಿರ್ದೇಶನ ನೀಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ADVERTISEMENT

ಇದಕ್ಕೆ ರಾಜ್ಯ ಸರ್ಕಾರ ಮತ್ತು ವಕ್ಫ್‌ ಬೋರ್ಡ್‌ ಪರ ಹಾಜರಿದ್ದ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ‘ಮಸೀದಿ ಯನ್ನು ವಕ್ಫ್‌ ಬೋರ್ಡ್‌ ಆಸ್ತಿ ಎಂದು1963ರಲ್ಲಿಯೇ ಅಧಿಸೂಚನೆ ಹೊರಡಿಸ ಲಾಗಿದೆ. ವಕ್ಫ್‌ ಬೋರ್ಡ್‌ ಆಸ್ತಿಯಲ್ಲಿ ಮದರಸಾ ಚಟುವಟಿಕೆಗೆ ಅವಕಾಶವಿದೆ’ ಎಂದು ಪ್ರತಿಪಾದಿಸಿದರು. ವಾದ-ಪ್ರತಿ ವಾದ ಆಲಿಸಿದ ನ್ಯಾಯಪೀಠ ವಿಚಾರಣೆ ಯನ್ನು ಇದೇ 20ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.