ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ ಸಂಬಂಧ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ರದ್ದುಪಡಿಸುವಂತೆ ಕೋರಿ ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಈ ಕುರಿತಂತೆ ಆದೇಶಿಸಿದೆ.
‘ನಿಯಮದ ಪ್ರಕಾರ ಇನ್ಸ್‌ಪೆಕ್ಟರ್‌ಗೆ ದೂರು ದಾಖಲಿಸುವ ಅಧಿಕಾರವಿಲ್ಲ. ಆದರೆ, ಈ ಪ್ರಕರಣದಲ್ಲಿ ಇನ್ಸ್‌ಪೆಕ್ಟರ್ ಖಾಸಗಿ ದೂರು ದಾಖಲಿಸಿರುವುದು ಮತ್ತು ಅದನ್ನು ಪರಿಗಣಿಸಿ ಮ್ಯಾಜಿಸ್ಪ್ರೇಟ್ ನ್ಯಾಯಾಲಯ ಕ್ರಮ ಜರುಗಿಸಿರುವುದು ಕಾನೂನುಬಾಹಿರ’ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ನ್ಯಾಯಪೀಠ ಎತ್ತಿಹಿಡಿಯುವ ಮೂಲಕ ಪ್ರಕರಣ ರದ್ದುಗೊಳಿಸಿದೆ.
‘ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಪ್ರತಿಭಟನೆ ಮಾಡಬಾರದು ಎಂದು ಸರ್ಕಾರ ಆದೇಶಿಸಿದೆ. ಸೂಲಿಬೆಲೆ ಈ ನಿಯಮ ಉಲ್ಲಂಘಿಸಿದ್ದಾರೆ ಮತ್ತು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಟೌನ್‌ಹಾಲ್ ಮುಂದೆ ಪ್ರತಿಭಟನೆ ನಡೆಸಿ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ. ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ’ ಎಂದು ಆರೋಪಿಸಿ ಖಾಸಗಿ ದೂರು ದಾಖಲಿಸಲಾಗಿತ್ತು.
ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.