ಬೆಂಗಳೂರು: ಹೆಚ್ಚುವರಿ ಶಿಕ್ಷಕರ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅನುಮತಿ ನೀಡಿದ್ದಾರೆ.
ಚುನಾವಣಾ ಆಯೋಗದ ಅನುಮತಿ ಪಡೆದು ಪ್ರಕ್ರಿಯೆ ಆರಂಭಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಶಿಕ್ಷಕರ ವರ್ಗಾವಣೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾರ್ಚ್ 4ರವರೆಗೆ ವಿಸ್ತರಿಸಿತ್ತು. ಸುಮಾರು 80 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ಅವಧಿ ಮುಗಿದರೂ, ಪ್ರಕ್ರಿಯೆ ಆರಂಭಿಸಿರಲಿಲ್ಲ. ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.
ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020ಯನ್ನು ಜಾರಿಗೊಳಿಸಿ, ರಾಜ್ಯ ಸರ್ಕಾರ ಕಳೆದ ಡಿಸೆಂಬರ್‌ನಲ್ಲಿ ಆದೇಶ ಹೊರಡಿಸಿತ್ತು. ಇದರಿಂದ ಒಮ್ಮೆ ವರ್ಗಾವಣೆಯಾದವರು ಮೂರು ವರ್ಷಗಳ ನಂತರ ಮತ್ತೆ ವರ್ಗಾವಣೆಗೆ ಕೋರಿಕೆ ಸಲ್ಲಿಸಬಹುದು. ಜಿಲ್ಲೆಯ ಒಳಗೆ ಹಾಗೂ ಇತರೆ ಜಿಲ್ಲೆಗಳಿಗೂ ವರ್ಗಾವಣೆ ಮಾಡಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.