ADVERTISEMENT

₹1 ಲಕ್ಷ ಇಡುಗಂಟು ನೀಡಲು ಆಗ್ರಹ: ಅಕ್ಷರ ದಾಸೋಹ ನೌಕರರ ಪ್ರತಿಭಟನೆ ಪ್ರಾರಂಭ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರ ಪ್ರತಿಭಟನೆ ಪ್ರಾರಂಭ

​ಪ್ರಜಾವಾಣಿ ವಾರ್ತೆ
Published 15 ಜುಲೈ 2024, 14:54 IST
Last Updated 15 ಜುಲೈ 2024, 14:54 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಸದಸ್ಯರು ಭಾಗವಹಿಸಿದ್ದರು –ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು: ನಿವೃತ್ತಿ ಹೊಂದಿದ ಹಾಗೂ ನಿವೃತ್ತಿ ಹೊಂದುತ್ತಿರುವ ಬಿಸಿಯೂಟ ನೌಕರರಿಗೆ ತಲಾ ₹1 ಲಕ್ಷ ಮೊತ್ತದ ಇಡುಗಂಟು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ (ಸಿಐಟಿಯು) ಸದಸ್ಯರು ಸ್ವಾತಂತ್ತ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.

ರಾಜ್ಯ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೂರಾರು ಅಕ್ಷರ ದಾಸೋಹ ನೌಕರರು ಸ್ವಾತಂತ್ರ್ಯ ಉದ್ಯಾನದಲ್ಲಿ ಹಾಕಿದ್ದ ತಾತ್ಕಾಲಿಕ ಪೆಂಡಾಲ್‌ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸೋಮವಾರ ಮಧ್ಯಾಹ್ನ ಸುರಿದ ಮಳೆಗೆ ಪೆಂಡಾಲ್‌ ಸೋರತೊಡಗಿತು. ಆದರೂ, ಅಕ್ಷರ ದಾಸೋಹ ನೌಕರರು ಛತ್ರಿಗಳನ್ನು ಹಿಡಿದುಕೊಂಡು ಪ್ರತಿಭಟನೆ ಮುಂದುವರಿಸಿದರು.

‘ಅಕ್ಷರ ದಾಸೋಹ ನೌಕರರಿಗೆ ಬಜೆಟ್‌ನಲ್ಲಿ ಹೆಚ್ಚಳ ಮಾಡಿದ ₹1 ಸಾವಿರ ವೇತನ 2023ರ ಜನವರಿಯಿಂದ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಬದಲಾಯಿಸಬೇಕು. ಎಸ್‌ಡಿಎಂಸಿ ಸದಸ್ಯರು ಅಡುಗೆ ನೌಕರರಿಗೆ ನೀಡುತ್ತಿರುವ ಕಿರುಕುಳ ನಿಯಂತ್ರಿಸಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ ನೌಕರರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

‘ಅಕ್ಷರ ದಾಸೋಹ ಯೋಜನೆಯನ್ನು ಸಂಪೂರ್ಣವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿ ಮುಂದುವರಿಸಬೇಕು. ಹಾಜರಾತಿ ಆಧಾರದಲ್ಲಿ ಕೆಲಸದಿಂದ ತೆಗೆಯುವ ಕ್ರಮವನ್ನು ಕೂಡಲೇ ನಿಲ್ಲಿಸಬೇಕು. ಬಿಸಿಯೂಟ ಯೋಜನೆಯನ್ನು ಕಾಯಂಗೊಳಿಸಬೇಕು. ಈ ಯೋಜನೆಯ ಯಾವುದೇ ಸ್ವರೂಪದ ಜವಾಬ್ದಾರಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡಬಾರದು’ ಎಂದರು.

‘ಬೇಸಿಗೆ ಮತ್ತು ದಸರಾ ರಜೆಗಳ ವೇತನ ನೀಡಬೇಕು. ಅಪಘಾತದಲ್ಲಿ ಮರಣ ಹೊಂದಿದ ಅಡುಗೆ ಸಿಬ್ಬಂದಿಯ ಕುಟುಂಬದವರಿಗೆ ಕೆಲಸ ನೀಡಬೇಕು. ಪ‍್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡಿಗೆ ಸಿಬ್ಬಂದಿಯನ್ನು ನೇಮಿಸಬೇಕು’ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಸಿಐಟಿಯು ಗೌರವ ಅಧ್ಯಕ್ಷೆ ಎಸ್. ವರಲಕ್ಷ್ಮಿ, ಅಧ್ಯಕ್ಷೆ ಲಕ್ಷ್ಮಿದೇವಿ, ಖಜಾಂಚಿ ಮಹಾದೇವಮ್ಮ, ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.