ADVERTISEMENT

ವಿಮಾನ ನಿಲ್ದಾಣ ಅಭಿವೃದ್ಧಿಗೆ ತೊಡಕು ನಿವಾರಿಸಿ: ಸಚಿವ ಎಂ.ಬಿ.ಪಾಟೀಲ

ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ, ಹಂಪಿಯಲ್ಲಿ ಏರ್‌ಸ್ಟ್ರಿಪ್‌

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 16:54 IST
Last Updated 24 ಆಗಸ್ಟ್ 2024, 16:54 IST
ಎಂ.ಬಿ.ಪಾಟೀಲ
ಎಂ.ಬಿ.ಪಾಟೀಲ   

ಬೆಂಗಳೂರು: ವಿವಿಧ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಮತ್ತು ಏರ್‌ಸ್ಟ್ರಿಪ್‌ ಅಭಿವೃದ್ಧಿಗೆ ಇರುವ ತೊಡಕುಗಳನ್ನು ತ್ವರಿತವಾಗಿ ಬಗೆಹರಿಸಿ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಮಾನ ನಿಲ್ದಾಣ ಮತ್ತು ಏರ್‌ಸ್ಟ್ರಿಪ್‌ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಗಳ ಅನುಷ್ಠಾನಕ್ಕೆ ತಾಂತ್ರಿಕ ಅಡಚಣೆಗಳು ಎದುರಾಗಿವೆ, ಭೂಮಿ ಗುರುತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಇವೆಲ್ಲವನ್ನೂ ತ್ವರಿತವಾಗಿ ಬಗೆಹರಿಸುವ ಜವಾಬ್ದಾರಿ ಅಧಿಕಾರಿಗಳದ್ದೇ ಆಗಿದೆ’ ಎಂದರು.

‘322 ಎಕರೆಯಲ್ಲಿ ನಿರ್ಮಿಸಲಾಗುತ್ತಿರುವ ರಾಯಚೂರು ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣಕ್ಕೆ ಡಿಪಿಆರ್‌ ಸಿದ್ದವಾಗಿದೆ. ಆದರೆ ಈವರೆಗೆ ಪರಿಸರ ಇಲಾಖೆಯ ಅನುಮತಿ ಪಡೆಯಲಾಗಿಲ್ಲ. ಈ ಕೆಲಸವನ್ನು ತ್ವರಿತವಾಗಿ ಮಾಡಬೇಕು. ಅಗತ್ಯಬಿದ್ದರೆ ಅಧಿಕಾರಿಗಳು ದೆಹಲಿಗೂ ಹೋಗಬೇಕು’ ಎಂದು ಸೂಚಿಸಿದರು.

ADVERTISEMENT

‘ಹಾಸನ ವಿಮಾನ ನಿಲ್ದಾಣ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಬೇಕು. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಬಹುತೇಕ ಮುಗಿದಿದ್ದು, ಅಗ್ನಿಶಾಮಕ ವಾಹನಗಳ ಖರೀದಿಗೆ ಕ್ರಮ ತೆಗೆದುಕೊಳ್ಳಿ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಚಿಕ್ಕಮಗಳೂರು, ಕೊಡಗು, ಧರ್ಮಸ್ಥಳ ಮತ್ತು ಹಂಪಿಯಲ್ಲಿ ಏರ್‌ಸ್ಟ್ರಿಪ್‌ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸುವ ಕೆಲಸ ಮಾಡಿ. ಚಿಕ್ಕಮಗಳೂರಿನಲ್ಲಿ 120 ಎಕರೆ ಗುರುತಿಸಲಾಗಿದ್ದು, ಇನ್ನೂ 17 ಎಕರೆ ಗುರುತಿಸಬೇಕಿದೆ. ಸ್ಥಳೀಯ ಶಾಸಕರು ಮತ್ತು ಜಿಲ್ಲಾಡಳಿತದ ಜತೆಗೆ ಚರ್ಚಿಸಿ, ಪ್ರಕ್ರಿಯೆ ಮುಗಿಸಿ’ ಎಂದು ಹೇಳಿದರು.

ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಎನ್‌.ಎಸ್‌.ಬೋಸರಾಜು, ಸಂಸದ ಕುಮಾರ ನಾಯಕ್‌, ಶಾಸಕ ತಮ್ಮಯ್ಯ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಮೂಲ ಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಕೊರ್ಲಪಟ್ಟಿ ಸಭೆಯಲ್ಲಿ ಇದ್ದರು.

‘ಉಡಾನ್‌ಗೆ ಪರ್ಯಾಯ ಪರಿಶೀಲಿಸಿ’

‘ಕೇಂದ್ರ ಸರ್ಕಾರದ ಉಡಾನ್‌ ಯೋಜನೆ ಸ್ಥಗಿತವಾಗಿರುವ ಕಾರಣ ಬೀದರ್‌ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಇಲ್ಲಿ ಪರ್ಯಾಯ ವ್ಯವಸ್ಥೆ ಮಾಡಿ ವಿಮಾನ ಕಾರ್ಯಾಚರಣೆ ಪುನರಾರಂಭಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಇದಕ್ಕಾಗಿ ವಿಮಾನಯಾನ ಸಂಸ್ಥೆಗಳ ಜತೆ ಮಾತುಕತೆ ನಡೆಸಿ’ ಎಂದು ಎಂ.ಬಿ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ‘ಉಡಾನ್ ಯೋಜನೆಯನ್ನು ಮತ್ತೆ ಆರಂಭಿಸಲು ಸಾಧ್ಯವೇ? ಅದು ಸಾಧ್ಯವಿದ್ದರೆ ರಾಜ್ಯ ಸರ್ಕಾರದ ಕಡೆಯಿಂದ ಯಾವೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನೂ ಪರಿಶೀಲಿಸಿ ವರದಿ ನೀಡಿ. ನಿಮ್ಮ ಮಟ್ಟದಲ್ಲೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದ್ದರೆ ತಕ್ಷಣವೇ ಆ ಕೆಲಸ ಮಾಡಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.