ಬೆಂಗಳೂರು: ನಗರದ ಚರ್ಚ್ ಸ್ಟ್ರೀಟ್ ರಸ್ತೆಯ ಪಾದಚಾರಿ ಮಾರ್ಗದಲ್ಲಿದ್ದ ಬೀದಿಬದಿ ವ್ಯಾಪಾರಿಗಳನ್ನು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ ಸ್ನೇಹಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಶುಕ್ರವಾರ ತೆರವುಗೊಳಿಸಲಾಯಿತು.
ಚರ್ಚ್ ಸ್ಟ್ರೀಟ್ ರಸ್ತೆಯ ಸುಮಾರು 1 ಕಿ.ಮೀ. ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪೊಲೀಸ್ ಸಿಬ್ಬಂದಿ, ಪಾಲಿಕೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳ ಸಹಯೋಗದಲ್ಲಿ ನಡೆಸಲಾಯಿತು. 20ಕ್ಕೂ ಹೆಚ್ಚು ಗ್ಯಾಂಗ್‌ಮನ್, ಎರಡು ಟಿಪ್ಪರ್‌ಗಳು ಹಾಗೂ ಆರು ಟ್ರ್ಯಾಕ್ಟರ್‌ಗಳ ಮೂಲಕ ಪಾದಚಾರಿ ಮಾರ್ಗದಲ್ಲಿದ್ದ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಯಿತು. ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಮಳಿಗೆಯ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
‘ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಈಗಾಗಲೇ ಅಂಗಡಿ, ಮಳಿಗೆಗಳ ಮಾಲೀಕರಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದರು. ಅದರಿಂದ ಪಾದಚಾರಿಗಳ ಓಡಾಟಕ್ಕೆ ಸಮಸ್ಯೆಯಾಗಿತ್ತು. ಚರ್ಚ್ ಸ್ಟ್ರೀಟ್‌ನ ಎರಡೂ ಬದಿಯಲ್ಲಿ ಸುಮಾರು 50 ಅಂಗಡಿ-ಮಳಿಗೆಗಳನ್ನು ತೆರೆಯಲಾಗಿತ್ತು. ಪಾದಚಾರಿ ಮಾರ್ಗದಲ್ಲಿರಿಸಿದ್ದ ಸಾಮಗ್ರಿಗಳನ್ನು ತೆರವುಗೊಳಿಸಲಾಗಿದೆ’ ಎಂದು ಸ್ನೇಹಲ್ ತಿಳಿಸಿದರು.
‘ಪಾದಚಾರಿ ಮಾರ್ಗದಲ್ಲಿ ಆಹಾರ ತಯಾರಿಸುವುದರಿಂದ ಆರೋಗ್ಯ ಮತ್ತು ನೈರ್ಮಲ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೆ ತೆರೆದ ಜಾಗದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬಳಸುವುದರಿಂದ ಅವಘಡ ಉಂಟಾಗಬಹುದು. ಪಾದಚಾರಿ ಮಾರ್ಗ ಒತ್ತುವರಿಯಿಂದಾಗಿ ಜನರು ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಾಗುತ್ತದೆ. ಇದರಿಂದ ವಾಹನ ಸಂಚಾರಕ್ಕೂ ತೊಡಕು. ಅಪಘಾತಗಳಿಗೂ ದಾರಿ. ಆದ್ದರಿಂದ ಪೂರ್ವ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು’ ಎಂದು ಮಾಹಿತಿ ನೀಡಿದರು.
ವಲಯ ಜಂಟಿ ಆಯುಕ್ತೆ ಸರೋಜಾ ಬಿ.ಬಿ., ಕಾರ್ಯಪಾಲಕ ಎಂಜಿನಿಯರ್ ಮುನಿರೆಡ್ಡಿ, ಸಂಬಂಧಪಟ್ಟ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.