ಬೆಂಗಳೂರು: ಬಡವರು, ಕೆಳ ಮಧ್ಯಮ ವರ್ಗದ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಅತ್ಯುನ್ನತ ಆರೋಗ್ಯ ಸೌಲಭ್ಯಗಳನ್ನು ಉಚಿತವಾಗಿ ಕಲ್ಪಿಸಲು ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಿವಾಜಿನಗರದ ಬ್ರಾಡ್‌ವೇ ರಸ್ತೆಯಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
‘ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಆರಂಭಿಸುವುದರಿಂದ ಅತ್ಯುತ್ತಮ ಆಸ್ಪತ್ರೆಯೂ ಜನರಿಗೆ ಸಿಗಲಿದೆ. ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನೂ ಒದಗಿಸಲಾಗುತ್ತದೆ. ಈ ಯೋಜನೆಯನ್ನು ಹಿಂದೆ ನಮ್ಮ ಸರ್ಕಾರ ಇದ್ದಾಗ ಜಾರಿಗೆ ತಂದಿತ್ತು. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ನಿಲ್ಲಿಸಿದ್ದರು. ನಾವು ಇದೀಗ ಮುಂದುವರಿಸಿದ್ದೇವೆ’ ಎಂದು ಹೇಳಿದರು.
‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸುವುದು ದೊಡ್ಡದಲ್ಲ. ಅಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು. ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಉಪಕರಣಗಳು, ಯಂತ್ರಗಳು ಉಪಯೋಗಕ್ಕೆ ಬಾರದಂತಾಗಿವೆ. ಈ ರೀತಿ ಆಗಬಾರದು. ಜನರಿಗೆ ಶುಚಿತ್ವದೊಂದಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು’ ಎಂದು ಸಿದ್ದರಾಮಯ್ಯ ತಾಕೀತು ಮಾಡಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ‘ಇನ್ಫೊಸಿಸ್‌ನ ಸುಧಾಮೂರ್ತಿ ಅವರು ₹10 ಕೋಟಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಅನುದಾನವನ್ನು ಚರಕ ಆಸ್ಪತ್ರೆಗೆ ನೀಡಿದ್ದಾರೆ. ನಾನು ಪ್ರತಿನಿಧಿಸುವ ಕನಕಪುರ ಕ್ಷೇತ್ರದಲ್ಲಿಯೂ ತಾಯಿ, ಮಗು ಆಸ್ಪತ್ರೆಯನ್ನು ಕಟ್ಟಿಸಿಕೊಟ್ಟಿದ್ದಾರೆ. ಆರೋಗ್ಯ ಕ್ಷೇತ್ರ ಮಾತ್ರವಲ್ಲ ಶಿಕ್ಷಣ ಕ್ಷೇತ್ರದಲ್ಲೂ ಸಿಎಸ್‌ಆರ್ ಅನುದಾನಗಳನ್ನು ಬಳಸಿಕೊಂಡು ಈ ವರ್ಷ 500 ಶಾಲೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಉನ್ನತೀಕರಿಸಲಾಗುವುದು. ಒಟ್ಟು 2000 ಶಾಲೆಗಳನ್ನು ಮೇಲ್ದರ್ಜೆಗೇರಿಸುವುದು ನಮ್ಮ ಗುರಿ’ ಎಂದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.
ಜನರ ಆಶೀರ್ವಾದ ಇರುವವರೆಗೆ ಸಿದ್ದರಾಮಯ್ಯನನ್ನು ಯಾರೂ ಅಲ್ಲಾಡಿಸಲು ಸಾಧ್ಯ ಇಲ್ಲ. ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡೇ ಮಾಡುತ್ತೇನೆಸಿದ್ದರಾಮಯ್ಯ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.