ADVERTISEMENT

ಕಾಂಗ್ರೆಸ್‌ ಸರ್ಕಾರ ರೈತ ವಿರೋಧಿ: ಬಿ.ವೈ. ವಿಜಯೇಂದ್ರ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 15:55 IST
Last Updated 7 ಜನವರಿ 2024, 15:55 IST
<div class="paragraphs"><p>ಬಿ.ವೈ. ವಿಜಯೇಂದ್ರ </p></div>

ಬಿ.ವೈ. ವಿಜಯೇಂದ್ರ

   

ಬೆಂಗಳೂರು: ‘ರಾಜ್ಯದಲ್ಲಿ ಬರಗಾಲದಿಂದ ರೈತರ ಸರಣಿ ಆತ್ಮಹತ್ಯೆಯಾಗುತ್ತಿದ್ದರೂ ನೆರವಿಗೆ ಬಾರದ ಕಾಂಗ್ರೆಸ್‌ ನೇತೃತ್ವದ ಸರ್ಕಾರ, ಅಲ್ಪಸಂಖ್ಯಾತರಿಗೆ ₹10,000 ಕೋಟಿ ಒದಗಿಸಲು ಹೊರಟಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.

ಪಕ್ಷದ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ನಿಕಟಪೂರ್ವ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲರವರೆಗೆ ಈ ಸರ್ಕಾರದಲ್ಲಿರುವ ಹಲವರು ರೈತರ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ₹5 ಲಕ್ಷ ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಶಿವಾನಂದ ಪಾಟೀಲ ಹೇಳಿದ್ದರು. ಇಂತಹ ಉಡಾಫೆ ಹೇಳಿಕೆ ನೀಡುವವರು ಸರ್ಕಾರದಲ್ಲಿರುವುದು ದುರಂತ’ ಎಂದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ಮಾತನಾಡಿ, ‘ಹಾಲು ಉತ್ಪಾದಕರಿಗೆ ಆರು ತಿಂಗಳಿನಿಂದ ಪ್ರೋತ್ಸಾಹಧನ ಪಾವತಿಯಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಕೃಷಿ ಕ್ಷೇತ್ರಕ್ಕೆ ₹7,500 ಕೋಟಿ ಒದಗಿಸಿತ್ತು. ಕಾಂಗ್ರೆಸ್‌ ಸರ್ಕಾರವು ತನ್ನ ಬಜೆಟ್‌ನಲ್ಲಿ ₹3,500 ಕೋಟಿಯನ್ನು ಕಿತ್ತುಕೊಂಡಿದೆ. ಈ ಎಲ್ಲ ವಿಚಾರಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದರು.

ಬಿಜೆಪಿ ರಾಜ್ಯ ಘಟಕದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ, ರೈತ ಮೋರ್ಚಾ ರಾಜ್ಯ ಘಟಕದ ನಿಕಟಪೂರ್ವ ಅಧ್ಯಕ್ಷ ಈರಣ್ಣ ಕಡಾಡಿ, ಮಹಿಳಾ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷೆ ಮಂಜುಳಾ ಸಿ. ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.