ADVERTISEMENT

ಧರ್ಮಾಕ್ರಸಿ ನಿಲ್ಲಿಸಿ; ದ್ವೇಷ ಬಿಟ್ಟು ದೇಶ ಕಟ್ಟಿ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕ

ಕ್ರೈಸ್ತ ಸಮುದಾಯದ ಮೇಲಿನ ದೌರ್ಜನ್ಯಗಳಿಗೆ ಖಂಡನೆ: ಕೆಪಿಸಿಸಿ ಅಲ್ಪಸಂಖ್ಯಾತ ಘಟಕದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 20:00 IST
Last Updated 4 ಜನವರಿ 2022, 20:00 IST
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು–ಪ್ರಜಾವಾಣಿ ಚಿತ್ರ 
ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು–ಪ್ರಜಾವಾಣಿ ಚಿತ್ರ    

ಬೆಂಗಳೂರು: ‘ನಮಗೆ ಬೇಕಿರುವುದು ಡೆಮಾಕ್ರಸಿ, ಧರ್ಮೋಕ್ರಸಿಯಲ್ಲ. ಧರ್ಮದ ಹೆಸರಿನಲ್ಲಿ ದೇಶ ಒಡೆಯುವುದನ್ನು ನಿಲ್ಲಿಸಿ.ದ್ವೇಷ ಬಿಟ್ಟು ದೇಶ ಕಟ್ಟಿ’ ...

ರಾಜ್ಯದಲ್ಲಿ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಲ್ಪಸಂಖ್ಯಾತ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕೇಳಿಬಂದ ಬೇಡಿಕೆ ಇದು.

ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಸಾಹಿತಿಗಳು, ಚಿತ್ರನಟರು, ರಾಜಕಾರಣಿಗಳು ಹಾಗೂ ಸಾಂಸ್ಕೃತಿಕ ಚಿಂತಕರು ಪಾಲ್ಗೊಂಡಿದ್ದರು.

ADVERTISEMENT

‘ದೇಶದಲ್ಲಿರುವ ಕ್ರೈಸ್ತ ಸಮುದಾಯದವರು ಸೌಹಾರ್ದ, ಶಾಂತಿ ಹಾಗೂ ಸಹಬಾಳ್ವೆಯ ಜೀವನ ನಡೆಸುತ್ತಿದ್ದಾರೆ. ಹೀಗಿದ್ದರೂ ಚರ್ಚ್‌ಗಳು, ಪಾದ್ರಿಗಳು ಹಾಗೂ ಕ್ರೈಸ್ತ ಮಿಷನರಿಗಳ ಮೇಲೆ ಕಿಡಿಗೇಡಿಗಳು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ದ್ವೇಷ ಭಾಷಣಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ರಾಷ್ಟ್ರದ ಏಕತೆಗೂ ಧಕ್ಕೆ ಉಂಟು ಮಾಡುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಧರ್ಮಗಳ ನಡುವೆ ಸಂಘರ್ಷ ಏರ್ಪಡುವಂತೆ ಮಾಡುತ್ತಿರುವ ದುಷ್ಕರ್ಮಿಗಳನ್ನು ಯುಎಪಿಎ ಕಾಯ್ದೆಯಡಿ ಬಂಧಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಹರಿದ್ವಾರದಲ್ಲಿ ನಡೆದಿರುವ ಧರ್ಮ ಸಂಸತ್‌ ಸಭೆಯಲ್ಲಿ ಕೆಲ ನಾಯಕರು ಮತೀಯ ಭಾವನೆ ಕೆರಳಿಸುವ ಮಾತುಗಳನ್ನು ಆಡಿದ್ದಾರೆ. ಪ್ರಧಾನಿ ಮತ್ತು ಗೃಹ ಸಚಿವರು ಇದನ್ನು ಖಂಡಿಸುವ ಸೌಜನ್ಯವನ್ನೂ ತೋರಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡಿರುವ ಇವರ ವಿರುದ್ಧ ಗೂಂಡಾ ಕಾಯ್ದೆ ಹಾಗೂ ಯುಎಪಿಎ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸಾಹಿತಿಗಳಾದ ಎಸ್‌.ಜಿ.ಸಿದ್ಧರಾಮಯ್ಯ, ವಸುಂಧರಾ ಭೂಪತಿ, ನಟ ’ಮುಖ್ಯಮಂತ್ರಿ’ ಚಂದ್ರು, ಶಾಸಕ ಎನ್‌.ಎ.ಹ್ಯಾರಿಸ್‌, ಕಾಂಗ್ರೆಸ್‌ ಮುಖಂಡರಾದ ಸಿ.ಎಸ್‌.ದ್ವಾರಕನಾಥ್‌, ಪ್ರೊ.ಕೆ.ಇ.ರಾಧಾಕೃಷ್ಣ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ಜಬ್ಬಾರ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.