ಬೆಂಗಳೂರು: ‘ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿ, ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಆಕ್ರೋಶ ಹೊರಹಾಕಿದರು. ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು.
‘ಬಿಜೆಪಿ ಆಡಳಿತದ ಅವಧಿಯಲ್ಲಿ ಕೋವಿಡ್‌ಗೆ ಸಂಬಂಧಿಸಿದಂತೆ ಹಗರಣ ನಡೆದಿದೆ. ಸುಮಾರು ₹40 ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ ನಾಯಕರು, ಇದಕ್ಕೆ ಸ್ಪಷ್ಟನೆ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
‘ಬಿಜೆಪಿಯ ಶೇ 40ರಷ್ಟು ಕಮಿಷನ್ ವಿರುದ್ಧ ಕಾಂಗ್ರೆಸ್ ಮೊದಲಿನಿಂದಲೂ ಹೋರಾಟ ನಡೆಸುತ್ತಿತ್ತು. ಈಗ ಆ ಹೋರಾಟಕ್ಕೆ ಬಿಜೆಪಿ ಶಾಸಕರಿಂದಲೇ ಉತ್ತರ ಸಿಕ್ಕಿದೆ’ ಎಂದು ಹೇಳಿದರು.
ಬಸನಗೌಡ ಪಾಟೀಲ ಯತ್ನಾಳ ಅವರು ಕೇಂದ್ರದ ಸಚಿವರಾಗಿದ್ದವರು. ಯತ್ನಾಳ ಮಾಡಿರುವ ಆರೋಪ ಗಂಭೀರ ಸ್ವರೂಪದ್ದು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರನ್ನು ಬಿಜೆಪಿಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಮುಖಂಡರಾದ ಜಿ.ಜನಾರ್ದನ್, ಸುಧಾಕರ್ ರಾವ್, ಪರಿಸರ ರಾಮಕೃಷ್ಣ, ಹೇಮರಾಜ್, ಪ್ರಕಾಶ್, ಓಬಳೇಶ್, ಉಮೇಶ್, ಆನಂದ್, ಚಂದ್ರಶೇಖರ, ದರ್ಶನ್, ಪುಟ್ಟರಾಜು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.