ADVERTISEMENT

ಸಂವಿಧಾನ ಜಾಗೃತಿ: ಜಿಲ್ಲಾಮಟ್ಟದ ಸಿದ್ಧತೆಗೆ ಸೂಚನೆ ನೀಡಿದ ಪ್ರಿಯಾಂಕ್‌ ಖರ್ಗೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2024, 16:03 IST
Last Updated 16 ಜನವರಿ 2024, 16:03 IST
<div class="paragraphs"><p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ</p></div>

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ

   

ಬೆಂಗಳೂರು: ಜನವರಿ 26ರಿಂದ ಒಂದು ತಿಂಗಳು ನಡೆಯುವ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಗೊಳಿಸಲು ಜಿಲ್ಲಾ ಮಟ್ಟದಲ್ಲಿ ಸಿದ್ಧತೆ ನಡೆಸುವಂತೆ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜಾಥಾ ಪೂರ್ವ ತಯಾರಿ ಕುರಿತು ಪರಿಶೀಲನೆ ನಡೆಸಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಜತೆ ಮಂಗಳವಾರ ವಿಡಿಯೊ ಕಾನ್ಫರೆನ್ಸ್‌ ನಡೆಸಿದ ಸಚಿವರು, ಸಿದ್ಧತೆಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.

ADVERTISEMENT

‘ಎಲ್ಲ ಜಿಲ್ಲೆಗಳಲ್ಲೂ ಜಾಥಾ ಸಂಚರಿಸುವ ಮಾರ್ಗಗಳ ನಕ್ಷೆಯನ್ನು ಅಂತಿಮಗೊಳಿಸಬೇಕು. ಯುವಜನರು, ಮಹಿಳೆಯರು ಸೇರಿದಂತೆ ಎಲ್ಲ ಜನರನ್ನೂ ತಲುಪುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಸಂವಿಧಾನದ ಪ್ರಸ್ತಾವನೆಯ ಮುದ್ರಿತ ಪ್ರತಿಗಳನ್ನು ವಿತರಿಸಬೇಕು’ ಎಂದು ಪ್ರಿಯಾಂಕ್‌ ಸೂಚಿಸಿದರು.

‘ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆ ನಿರ್ಧರಿಸಬೇಕು. ಆಯಾ ಪ್ರದೇಶದಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಸ್ತಬ್ಧಚಿತ್ರದ ಮೆರವಣಿಗೆಯಲ್ಲಿ ಪ್ರದರ್ಶಿಸಬೇಕು. ಆಯಾ ಜಿಲ್ಲೆಯಲ್ಲಿನ ಸರ್ಕಾರೇತರ ಸಂಸ್ಥೆಗಳು, ವಿವಿಧ ಸಂಘಟನೆಗಳನ್ನೂ ಒಳಗೊಳ್ಳಬೇಕು’ ಎಂದು ಮಹದೇವಪ್ಪ ನಿರ್ದೇಶನ ನೀಡಿದರು.

ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಪಂಚಾಯತ್‌ ರಾಜ್‌ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್‌ ಕುಮಾರ್‌, ಪಂಚಾಯತ್‌ ರಾಜ್‌ ಇಲಾಖೆ ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.