ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆಯಡಿ ಬರುವ ಅಕಾಡೆಮಿ, ಪ್ರಾಧಿಕಾರಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಎಲ್ಲ ಅಧ್ಯಕ್ಷರನ್ನೂ ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ಅಕಾಡೆಮಿ–ಪ್ರಾಧಿಕಾರಗಳ ಅಧ್ಯಕ್ಷರಲ್ಲೇ ಒಬ್ಬರನ್ನು ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿ ಮಾಡವ ಅಥವಾ ಸಚಿವರೇ ಅಧ್ಯಕ್ಷರಾಗುವ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಪ್ರತಿ ತಿಂಗಳು ಕನಿಷ್ಠ ಎರಡು ಅಕಾಡೆಮಿಗಳ ಅಧ್ಯಕ್ಷರು, ಸದಸ್ಯರನ್ನು ಕರೆದು ಸಭೆ ನಡೆಸಲಾಗುವುದು. ಸಂವಿಧಾನದ ಆಶಯಗಳಿಗೆ ಪೂರಕವಾಗಿ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಅಕಾಡೆಮಿಗಳ ಪತ್ರ ವ್ಯವಹಾರದಲ್ಲಿ ‘ಕರ್ನಾಟಕ’ಎಂದು ನಾಮಕರಣಗೊಂಡ ಸುವರ್ಣ ವರ್ಷದ ಲೋಗೊ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ ಎಂದರು.
ಗಡಿ ಸಮಸ್ಯೆಯತ್ತ ಗಮನ
ಮಹಾರಾಷ್ಟ್ರ ಸರ್ಕಾರ ಗಡಿ ಭಾಗದ ಕನ್ನಡ ಶಾಲೆಗಳಿಗೆ ಮರಾಠಿ ಭಾಷಾ ಶಿಕ್ಷಕರನ್ನು ನೇಮಿಸಿರುವ ಕುರಿತು ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಲ್ಲಿನ ಸರ್ಕರಕ್ಕೆ ಪತ್ರ ಬರೆದಿದೆ. ಸರ್ಕಾರವೂ ಗಮನಹರಿಸಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.
ಗಡಿ ಭಾಗದ ಕನ್ನಡ ಶಾಲೆಗಳು, ಆ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಬೆಂಗಳೂರು ಸೇರಿದಂತೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಇರುವ ಎಲ್ಲ ಅಡೆತಡೆ ನಿವಾರಿಸಿ, ಅನುಷ್ಠಾನಗೊಳಿಸಲಾಗುವುದು ಎಂದರು.
ಮಂಡ್ಯದಲ್ಲೇ ಸಮ್ಮೇಳನ:
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲೇ ನಡೆಸಲಾಗುವುದು. ಸಣ್ಣ ಪುಟ್ಟ ಸಮಸ್ಯೆಗಳಿದ್ದು, ಪರಿಷತ್ ಅಧ್ಯಕ್ಷರ ಜೊತೆ ಚರ್ಚಿಸಿ ಬಗೆಹರಿಸಲಾಗುವುದು. ನವೆಂಬರ್– ಡಿಸೆಂಬರ್‌ನಲ್ಲಿ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದರು.
ಕನ್ನಡ ಶಾಲೆಗೆ ಮರಾಠಿ ಶಿಕ್ಷಕರು; ಮಹಾರಾಷ್ಟ್ರಕ್ಕೆ ಪತ್ರ:
ಮಹಾರಾಷ್ಟ್ರ ಗಡಿ ಭಾಗದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಕುರಿತು ಅಲ್ಲಿನ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಕನ್ನಡ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕೇರಳದ ಕಾಸರಗೋಡಿನ ಕನ್ನಡ ಶಾಲೆಯೊಂದಕ್ಕೆ ಮಲಯಾಳ ಭಾಷೆಯ ಶಿಕ್ಷಕರನ್ನು ನೇಮಿಸಿತ್ತು. ಸರ್ಕಾರದ ಮಧ್ಯಪ್ರವೇಶದ ಬಳಿಕ ಕನ್ನಡ ಶಿಕ್ಷಕರನ್ನು ನೇಮಿಸಿತ್ತು. ಇದೀಗ ಮಹಾರಾಷ್ಟ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆದು ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂ ಚರ್ಚಿಸಲಾಗಿದೆ ಎಂದರು.
ಗಡಿ ಭಾಗದ ಕನ್ನಡ ಶಾಲೆಗಳು, ಆ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು. ಗಡಿನಾಡ ಉತ್ಸವಗಳನ್ನು ಹಮ್ಮಿಕೊಳ್ಳಲು ಕ್ರಮಕೈಗೊಳ್ಳಲಾಗುವುದು. ಬೆಂಗಳೂರು ಸೇರಿದಂತೆ ಎಲ್ಲೆಡೆ ಕನ್ನಡ ನಾಮಫಲಕ ಕಡ್ಡಾಯಕ್ಕೆ ಇರುವ ಎಲ್ಲ ಅಡೆತಡೆ ನಿವಾರಿಸಿ, ಅನುಷ್ಠಾನಗೊಳಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.