ಬೆಂಗಳೂರು: ‘ಚಾಲನಾ ಪರವಾನಗಿ(ಡಿ.ಎಲ್) ಇಲ್ಲದಿರುವವರು ಮದ್ಯ ಸೇವಿಸಿ ವಾಹನ ಚಾಲನೆ ಮಾಡಿರುವುದು ಪತ್ತೆಯಾದರೆ ಅಂತಹವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಹೇಳಿದರು.
‘ಡಿ.ಎಲ್ ರಹಿತವಾಗಿ ವಾಹನ ಚಾಲನೆ ಮಾಡಿದ್ದ ಸವಾರರೊಬ್ಬರು ಮದ್ಯ ಸೇವಿಸಿದ್ದು ಪತ್ತೆಯಾಗಿದ್ದು, ಅವರ ವಿರುದ್ಧ ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸುದ್ದಿಗಾರರಿಗೆ ಸೋಮವಾರ ತಿಳಿಸಿದರು.
53 ಸಾವಿರ ವಾಹನ ತಪಾಸಣೆ: ‘ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಕಳೆದ ವಾರ ಕಾರ್ಯಾಚರಣೆ ನಡೆಸಲಾಗಿತ್ತು. ಒಟ್ಟು 53 ಸಾವಿರಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಲಾಗಿದೆ. ಅದರಲ್ಲಿ 794 ಮಂದಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಡಿ.ಎಲ್ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ನೀಡಿದರು.
‘ನಗರದಲ್ಲಿ ಇ–ಬೈಕ್ ಬಳಸಿಕೊಂಡು ಹಲವರು ಫುಡ್ ಡೆಲಿವರಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಚಾರ ನಿಯಮ ಉಲ್ಲಂಘಿಸುತ್ತಿರುವುದು ಪತ್ತೆಯಾಗಿತ್ತು. ಕಳೆದ ವಾರ ಸಂಚಾರ ನಿಯಮ ಪಾಲಿಸುವಂತೆ ಜಾಗೃತಿ ಮೂಡಿಸಲಾಗಿತ್ತು. ಆದರೂ ಇ–ಬೈಕ್ ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಕಂಡುಬಂದಿದೆ. ಇದೀಗ ಅವರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ದಂಡ ಸಂಗ್ರಹಿಸಲಾಗುತ್ತಿದೆ. ಇ–ಬೈಕ್‌ಗಳಿಗೆ ಸಂಚಾರ ನಿಯಮ ಅನ್ವಯಿಸುವುದಿಲ್ಲ ಎನ್ನುವ ತಪ್ಪು ತಿಳಿವಳಿಕೆ ಇದೆ. ಇ–ಬೈಕ್ ಸೇರಿದಂತೆ ಎಲ್ಲ ದ್ವಿಚಕ್ರ ವಾಹನಗಳ ಸವಾರರೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಹೇಳಿದರು.
‘ನಗರದಲ್ಲಿ ಪಾನಮತ್ತರಾಗಿ ಶಾಲಾ ವಾಹನ ಚಲಾಯಿಸುವವರ ಪತ್ತೆಗಾಗಿ ಸಂಚಾರ ಪೊಲೀಸರು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. 10 ತಿಂಗಳಲ್ಲಿ 20 ಸಾವಿರ ಶಾಲಾ ವಾಹನಗಳ ತಪಾಸಣೆ ಮಾಡಿ 120 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಾನಮತ್ತ ಚಾಲಕರ ಚಾಲನಾ ಪರವಾನಗಿ ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗಿದೆ’ ಎಂದರು.
ಶಾಲಾ ವಾಹನಗಳಲ್ಲಿ ನಿಗದಿಗಿಂತ ಹೆಚ್ಚುವರಿ ಮಕ್ಕಳನ್ನು ಕರೆದೊಯ್ಯುತ್ತಿರುವುದರ ವಿರುದ್ಧವೂ ನಿರಂತರವಾಗಿ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ಶಾಲಾ ಆಡಳಿತ ಮಂಡಳಿಗಳಿಗೂ ನೋಟಿಸ್ ನೀಡಲಾಗುತ್ತಿದೆ. ಸುರಕ್ಷತೆಯ ದೃಷ್ಟಿಯಿಂದ ಈ ವಿಶೇಷ ಕಾರ್ಯಾಚರಣೆ ಮುಂದುವರೆಸಲಾಗುವುದು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.