ADVERTISEMENT

ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ದಲಿತ ಸಂಘಟನೆಗಳ ಖಂಡನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:43 IST
Last Updated 30 ಜುಲೈ 2024, 15:43 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮುಡಾ ನಿವೇಶನ ಹಂಚಿಕೆ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ. ಆದರೂ, ವಿರೋಧ ಪಕ್ಷಗಳು ಸಿದ್ದರಾಮಯ್ಯ ಅವರು ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತಿರುವುದು ಖಂಡನೀಯ’ ಎಂದು ಡಾ.ಬಿ.ಆರ್. ಅಂಬೇಡ್ಕರ್‌ ದಲಿತ ಸಂಘಟನೆಗಳ ಒಕ್ಕೂಟ ಹೇಳಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಶ್ರೀಧರ ಕಲಿವೀರ, ‘ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್‌ ಬ್ಯಾಂಕ್‌ ಶಾಖೆಯಲ್ಲಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ₹94 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿತ್ತು. ಹಗರಣದಲ್ಲಿ ಭಾಗಿಯಾಗಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಮತ್ತು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಲಾಗಿದೆ. ಹಾಗಿದ್ದರೂ, ಸಿದ್ದರಾಮಯ್ಯ ಅವರನ್ನು ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ದೂರಿದರು.

‘ಯೂನಿಯನ್‌ ಬ್ಯಾಂಕ್‌ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಈ ಹಗರಣದಲ್ಲಿ ಭಾಗಿಯಾಗಿರುವ ಬ್ಯಾಂಕ್‌ನ ಅಧಿಕಾರಿಗಳನ್ನು ಸಿಬಿಐ ಇದುವರೆಗೂ ಬಂಧಿಸಿಲ್ಲ’ ಎಂದು ಆರೋಪಿಸಿದರು.

ADVERTISEMENT

‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂಬ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಆರೋಪ ಸತ್ಯಕ್ಕೆ ದೂರವಾಗಿದೆ. ಮುಖ್ಯಮಂತ್ರಿಯವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಜೆಡಿಎಸ್‌ ಪಕ್ಷಗಳು ವಿಧಾನಮಂಡಲ ಮತ್ತು ಸಂಸತ್ತಿನಲ್ಲಿ ಪ್ರತಿಭಟನೆ ಮಾಡಿರುವುದು ಖಂಡನೀಯ. ಹಿಂದುಳಿದ ವರ್ಗಗಳಿಗೆ ಸೇರಿರುವ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿರುವುದನ್ನು ಮನುವಾದಿ ಮೈತ್ರಿ ಪಕ್ಷಗಳ ನಾಯಕರು ಸಹಿಸದೇ ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ದೂರಿದರು.

ಒಕ್ಕೂಟದ ಅಣ್ಣಯ್ಯ, ಮಂಜುನಾಥ ಅಣ್ಣಯ್ಯ, ಎಂ. ಗೋವಿಂದರಾಜ, ರಾಜಗೋಪಾಲ ಡಿ.ಎಸ್., ಎ. ಗೋಪಾಲ, ನಾಗೇಶ ಎಂ., ಬಸವರಾಜ್ ಪತ್ರಿಕಾಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.