ADVERTISEMENT

ಕನಕಪುರದಲ್ಲೇಕೆ ಉಪ ಚುನಾವಣೆ ನಡೆಯುತ್ತೆ?: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 15:29 IST
Last Updated 21 ಜೂನ್ 2024, 15:29 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದರೆ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಏಕೆ ಉಪ ಚುನಾವಣೆ ನಡೆಯಬೇಕು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಶ್ನಿಸಿದರು.

‘ಸ್ವಪ್ರತಿಷ್ಠೆಗಾಗಿ ಉಪ ಚುನಾವಣೆ ಹೆಸರಿನಲ್ಲಿ ದೇಶದ ಸಂಪತ್ತು ಹಾಳು ಮಾಡುತ್ತಿದ್ದಾರೆ’ ಎಂಬ ಬಿಜೆಪಿ ಶಾಸಕ ಎಸ್‌.ಸುರೇಶ್ ಕುಮಾರ್‌ ಟೀಕೆ ಕುರಿತು ಸುದ್ದಿಗಾರರಿಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ‘ನಾನು ಕನಕಪುರದ ಶಾಸಕ. ಪಕ್ಷದ ಅಧ್ಯಕ್ಷನಾಗಿ ನನ್ನ ಮೇಲೆ ಜವಾಬ್ದಾರಿ ಇದೆ. ಚನ್ನಪಟ್ಟಣವೂ ನನ್ನದೇ ಕ್ಷೇತ್ರ, ಅಲ್ಲಿಗೂ ನನ್ನದೇ ನಾಯಕತ್ವ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಸೇರಿಕೊಂಡು ಚುನಾವಣೆ ನಡೆಸುತ್ತೇವೆ’ ಎಂದರು.

‘ಚನ್ನಪಟ್ಟಣದಲ್ಲಿ ಶಿವಕುಮಾರ್ ರಾಜಕೀಯ ಅಂತ್ಯವಾಗಲಿದೆ’ ಎಂಬ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ನನ್ನ ರಾಜಕೀಯ ಅಂತ್ಯ ಕುರಿತು ತೀರ್ಮಾನ ಮಾಡುವವರು ಜನರು. ಬೇರೆ ಯಾರಿಗೂ ಅದು ಸಾಧ್ಯವಿಲ್ಲ. ಜನರೇ ನನ್ನ ಹಿಂದಿರುವ ಶಕ್ತಿ’ ಎಂದು ಹೇಳಿದರು.

‘ಯೋಗೇಶ್ವರ್ ದೊಡ್ಡವರು. ಅವರ ಮಾತಿಗೆ ಪ್ರತಿಕ್ರಿಯೆ ನೀಡುವಷ್ಟು ಸಮಯ ನನ್ನ ಬಳಿ ಇಲ್ಲ. ನಾನೂ ರಾಮನಗರ ಜಿಲ್ಲೆಯವನು. ನಿಮ್ಮ ಋಣ ತೀರಿಸಲು ಬದ್ಧನಿದ್ದೇನೆ, ಶಕ್ತಿ ಕೊಡಿ ಎಂದು ಆ ಕ್ಷೇತ್ರದ ಜನರ ಬಳಿ ಕೇಳಿಕೊಂಡಿದ್ದೇನೆ. ನನ್ನ ಮೇಲೆ ವಿಶ್ವಾಸವಿದ್ದರೆ ಬೆಂಬಲ ನೀಡುತ್ತಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.