ADVERTISEMENT

ಯಲಹಂಕ ಶಾಸಕರಿಗೆ ಕೊಲೆ ಬೆದರಿಕೆ ಆರೋಪ: ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಕಾರ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 21:40 IST
Last Updated 21 ನವೆಂಬರ್ 2024, 21:40 IST
<div class="paragraphs"><p> ಹೈಕೋರ್ಟ್‌ </p></div>

ಹೈಕೋರ್ಟ್‌

   

ಬೆಂಗಳೂರು: ಯಲಹಂಕ ಶಾಸಕ ಎಸ್‌.ಆರ್.ವಿಶ್ವನಾಥ್‌ ಅವರಿಗೆ ಕೊಲೆ ಬೆದೆರಿಕೆ ಹಾಕಿದ ಆರೋಪಕ್ಕೆ ಸಂಬಂಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಪ್ರಕರಣದ ಮೊದಲನೇ ಆರೋಪಿಯಾದ ಹೆಸರಘಟ್ಟ ಹೋಬಳಿಯ ಮುತ್ತುಗದಹಳ್ಳಿಯ ಎಂ.ಎನ್‌.ಗೋಪಾಲಕೃಷ್ಣ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

ADVERTISEMENT

‘ಮೇಲ್ನೋಟಕ್ಕೆ ಆರೋಪಿಯ ವಿರುದ್ಧದ ಆಪಾದನೆಗಳಲ್ಲಿ ಸಾಕಷ್ಟು ಸಾಕ್ಷ್ಯಗಳಿವೆ ಎಂಬುದು ಕಂಡು ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಪ್ರಕರಣದಲ್ಲಿ ತನಿಖಾಧಿಕಾರಿಯು ಪೆನ್ ಡ್ರೈವ್, ಪತ್ರ ಸೇರಿದಂತೆ ಅಮೂಲ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ ಎಂಬುದು ಗಮನಾರ್ಹ’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

‘ವಿಸ್ತೃತ ತನಿಖೆಯಿಂದ ಮಾತ್ರವೇ ಗೋಪಾಲಕೃಷ್ಣ ವಿರುದ್ಧ ದೂರುದಾರ ವಿಶ್ವನಾಥ್‌ ಮಾಡಿರುವ ಆರೋಪಗಳ ಸತ್ಯಾಂಶ ಹೊರಬರಲು ಸಾಧ್ಯ. ಹಾಗಾಗಿ, ಈ ಹಂತದಲ್ಲಿ ಗೋಪಾಲಕೃಷ್ಣ ವಿರುದ್ಧದ ನ್ಯಾಯಿಕ ಪ್ರಕ್ರಿಯೆಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಪ್ರಕರಣವೇನು?: ‘ಎಂ.ಎನ್‌.ಗೋಪಾಲಕೃಷ್ಣ ಹಾಗೂ ಮತ್ತೊಬ್ಬ ವ್ಯಕ್ತಿ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಮುಗಿಸುವುದಾಗಿ ಸಂಭಾಷಣೆ ನಡೆಸಿದ್ದಾರೆ’ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದನ್ನು ಆಧರಿಸಿ ವಿಶ್ವನಾಥ್‌ 2021ರ ಡಿಸೆಂಬರ್ 1ರಂದು ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ, ಭಾರತೀಯ ದಂಡ ಸಂಹಿತೆ–1860ರ ಕಲಂ 120ಬಿ ಮತ್ತು 506ರ ಅಡಿಯಲ್ಲಿ ದೂರು ದಾಖಲಿಸಿದ್ದರು.

ದೂರು ಸಲ್ಲಿಸಿದ ದಿನವೇ ಶಾಸಕರ ಕಚೇರಿಗೆ ಲಕೋಟೆಯೊಂದು ಬಂದಿತ್ತು. ಅದರಲ್ಲಿ ಪೆನ್‌ ಡ್ರೈವ್ ಹಾಗೂ ಬೆದರಿಕೆ ಪತ್ರವಿತ್ತು. ಪೊಲೀಸರು ಇದನ್ನು ವಶಕ್ಕೆ ಪಡೆದಿದ್ದರು. ಏತನ್ಮಧ್ಯೆ, ತಮ್ಮ ವಿರುದ್ಧದ ದೂರನ್ನು ರದ್ದುಗೊಳಿಸುವಂತೆ ಕೋರಿ ಗೋಪಾಲಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ‘ತಾಂತ್ರಿಕ ಕಾರಣಗಳಿಂದಾಗಿ ದೂರು ಸಲ್ಲಿಸಿರುವ ಪ್ರಕ್ರಿಯೆ ಸರಿಯಾಗಿಲ್ಲ. ಹಾಗಾಗಿ, ಪ್ರಕರಣವನ್ನು ರದ್ದುಗೊಳಿಸಲಾಗುತ್ತಿದೆ. ಆದರೆ, ಅರ್ಜಿದಾರರು ಹೊಸದಾಗಿ ದೂರು ಸಲ್ಲಿಸಲು ಸ್ವತಂತ್ರರು’ ಎಂದು ಆದೇಶಿಸಿತ್ತು.

ಈ ಆದೇಶ ಹೊರಬಂದ ನಂತರ ವಿಶ್ವನಾಥ್‌ ಗೋಪಾಲಕೃಷ್ಣ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರಿನ ಬಗ್ಗೆ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ, ಆರೋಪಿ ವಿರುದ್ಧ ತನಿಖೆ ನಡೆಸುವಂತೆ ರಾಜಾನುಕುಂಟೆ ಪೊಲೀಸರಿಗೆ ನಿರ್ದೇಶಿಸಿತ್ತು. ಇದನ್ನು ಪ್ರಶ್ನಿಸಿದ್ದ ಗೋಪಾಲಕೃಷ್ಣ ‘ತನಿಖೆಗೆ ತಡೆ ನೀಡಬೇಕು ಮತ್ತು ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.