ಬೆಂಗಳೂರು: ಜೈನ ಧರ್ಮೀಯರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು ಎಂದು ದಿಗಂಬರ್ ಜೈನ್ ಗ್ಲೋಬಲ್ ಮಹಾಸಭಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಅಧ್ಯಕ್ಷ ಮಹೇಶ್ ಜೈನ್, ‘ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಿ ವಾರ್ಷಿಕ ₹200 ಕೋಟಿ ಅನುದಾನ ನೀಡಬೇಕು. ಜೈನ ಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳಲ್ಲಿ ಪ್ರತ್ಯೇಕ ವಿದ್ಯಾರ್ಥಿನಿಲಯಗಳನ್ನು ಆರಂಭಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಜೈನ ಸಮುದಾಯದವರನ್ನು ಆಯ್ಕೆ ಮಾಡಬೇಕು’ ಎಂದು ಆಗ್ರಹಿಸಿದರು.
‘ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಜೈನ ಸಮುದಾಯದ ನಿರ್ದೇಶಕರನ್ನು ಆಯ್ಕೆ ಮಾಡಬೇಕು. ನಿಗಮದ ಅಧ್ಯಕ್ಷ ಸ್ಥಾನ ಎಲ್ಲ ಸಮುದಾಯದವರಿಗೂ ಸಿಗುವಂತೆ ನಿಯಮ ರೂಪಿಸಬೇಕು. ಜೈನ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ಇದ್ದು, ಅದನ್ನು ಶೇಕಡ 20ಕ್ಕೆ ಹೆಚ್ಚಿಸಬೇಕು. ರಾಜ್ಯದಲ್ಲಿ ಪ್ರಾಚೀನ ಜೈನ ಬಸದಿಗಳು ಮತ್ತು ಅವುಗಳ ಆಸ್ತಿಗಳ ಸಂರಕ್ಷಣೆಗೆ ಕಾನೂನು ರೂಪಿಸಬೇಕು’ ಎಂದು ಒತ್ತಾಯಿಸಿದರು.
‘ಮುಂದಿನ ಒಂದು ತಿಂಗಳೊಳಗೆ ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.