ADVERTISEMENT

ಕೆಪಿಎಸ್‌ಸಿ ಪರೀಕ್ಷೆ ಮುಂದೂಡಲು ಆಗ್ರಹ: ಪರೀಕ್ಷಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 16:23 IST
Last Updated 24 ಆಗಸ್ಟ್ 2024, 16:23 IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕೆಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಶೂ ಪಾಲಿಶ್‌ ಮಾಡುವ ಮೂಲಕ ಶನಿವಾರ ಪ್ರತಿಭಟನೆ ನಡೆಸಿದರು
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕೆಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಶೂ ಪಾಲಿಶ್‌ ಮಾಡುವ ಮೂಲಕ ಶನಿವಾರ ಪ್ರತಿಭಟನೆ ನಡೆಸಿದರು   

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಆಗಸ್ಟ್‌ 27ರಂದು ನಡೆಸಲಿರುವ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಆಗ್ರಹಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ವಿವಿಧ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರ ಹಾಗೂ ಕೆಪಿಎಸ್‌ಸಿ ವಿರುದ್ಧ ಆಕ್ರೋಶ ಹೊರಹಾಕಿ ಘೋಷಣೆ ಕೂಗಿದರು. ಹಲವು ವರ್ಷಗಳಿಂದ ಕಷ್ಟಪಟ್ಟು ಅಭ್ಯಾಸ ನಡೆಸಿದ್ದವರನ್ನು ಸರ್ಕಾರವೇ ನಿರುದ್ಯೋಗಿಗಳನ್ನಾಗಿ ಮಾಡಲು ಮುಂದಾಗಿದೆ ಎಂದು ಆಕ್ರೋಶ ಹೊರಹಾಕಿದರು. ಶೂ ಪಾಲಿಶ್‌ ಮಾಡಿ ಪ್ರತಿಭಟಿಸಿದರು.

ADVERTISEMENT

‘ಎಲ್ಲ ವರ್ಗದವರಿಗೂ ಅನುಕೂಲ ಆಗಲಿ ಎಂಬ ಕಾರಣಕ್ಕೆ ಭಾನುವಾರ ಪರೀಕ್ಷೆ ನಡೆಸಬೇಕು. ಆದರೆ, ವಾರದ ಮಧ್ಯದಲ್ಲಿ ಪರೀಕ್ಷೆ ನಡೆಸಿ ಅವಕಾಶ ವಂಚಿತರನ್ನಾಗಿ ಮಾಡಲಾಗುತ್ತಿದೆ’ ಎಂದು ನೋವು ತೋಡಿಕೊಂಡರು.

ಆಗಸ್ಟ್‌ 27ರಂದು ಯುಜಿಸಿಯ ನೆಟ್ ಪರೀಕ್ಷೆಯೂ ನಡೆಯುತ್ತಿದೆ. ಅಂದೇ ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದೆ. ಎರಡೂ ಪರೀಕ್ಷೆ ತೆಗೆದುಕೊಂಡವರು, ಯಾವುದಾದರೂ ಒಂದು ಪರೀಕ್ಷೆಯಿಂದ ವಂಚಿತರಾಗಬೇಕಿದೆ. ಆದ್ದರಿಂದ, ಕೆಪಿಎಸ್‌ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿದರು.

‘ಮಂಗಳವಾರ ಕೇಂದ್ರ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳ ನೌಕರರಿಗೆ ರಜೆ ಸಿಗುವುದಿಲ್ಲ. ಅಲ್ಲದೇ ಪರೀಕ್ಷಾ ಕೇಂದ್ರಗಳೂ 400 ಕಿ.ಮೀ ದೂರದಲ್ಲಿವೆ. ಆ ಸ್ಥಳಕ್ಕೆ ತಲುಪುವುದೂ ಕಷ್ಟವಾಗಿದೆ’ ಎಂದು ಹೇಳಿದರು.

‘2017–18ನೇ ಬ್ಯಾಚ್‌ನ ಅಭ್ಯರ್ಥಿಗಳಿಗೂ ಅವಕಾಶ ನೀಡಲಾಗಿದೆ. ಆದರೆ, ಅಭ್ಯಾಸಕ್ಕೆ ಸಮಯ ಇಲ್ಲ’ ಎಂದು ಆಕಾಂಕ್ಷಿಗಳು ಹೇಳಿದರು.

ಕೆಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲು ಸಾಧ್ಯವಿಲ್ಲ. ಕೃಷ್ಣ ಜನ್ಮಾಷ್ಟಮಿಯಂದು ನಿಗದಿಯಾಗಿದ್ದ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ
ಸಿದ್ದರಾಮಯ್ಯ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.