ಬೆಂಗಳೂರು: ‘ಡೆಂಗಿ ಜ್ವರದ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ರೀತಿಯ ಭಯ ಪಡುವ ಅವಶ್ಯಕತೆ ಇಲ್ಲ’ ಎಂದು ವಿನಯ್ ಗುರೂಜಿ ಹೇಳಿದರು.
ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಭಾನುವಾರ ಉತ್ತರಹಳ್ಳಿಯಲ್ಲಿ ಆಯೋಜಿಸಿದ್ದ ‘ಸ್ವಚ್ಛತಾ ಅಭಿಯಾನ ಹಾಗೂ ಸೊಳ್ಳೆಗಳ ನಿವಾರಣೆಗೆ ಔಷಧಿ ಸಿಂಪಡಿಸುವ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಮಳೆ ಪ್ರಮಾಣ ಹೆಚ್ಚುತ್ತಿದ್ದು, ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ನಗರಗಳಲ್ಲಿ ಜನರು ಸ್ವಚ್ಛತೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಬೇಕು’ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬಿಬಿಎಂಪಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಎಂ. ಕೃಷ್ಣಪ್ಪ, ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ನ ಮಣಿ ಹೆಗ್ಡೆ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.