ADVERTISEMENT

ಡೆಂಗಿ: ಖಾಸಗಿ ಆಸ್ಪತ್ರೆಗೆ ದರ ನಿಗದಿಗೆ ಸೂಚನೆ

ರೋಗ ನಿಯಂತ್ರಣದ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಸಭೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 15:33 IST
Last Updated 2 ಜುಲೈ 2024, 15:33 IST
<div class="paragraphs"><p>ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆಂಗಿ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಬೆಂಗಳೂರಿನಲ್ಲಿ ಮಂಗಳವಾರ ಸಭೆ ನಡೆಸಿದರು.</p></div>

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆಂಗಿ ನಿಯಂತ್ರಣ ಕುರಿತು ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಬೆಂಗಳೂರಿನಲ್ಲಿ ಮಂಗಳವಾರ ಸಭೆ ನಡೆಸಿದರು.

   

ಪ್ರಜಾವಾಣಿ ಚಿತ್ರ.

ಬೆಂಗಳೂರು: ಡೆಂಗಿ ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಗಳಿಗೂ ದರ ನಿಗದಿಪಡಿಸಿ, ಬುಧವಾರವೇ ಸುತ್ತೋಲೆ ಹೊರಡಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ADVERTISEMENT

ಡೆಂಗಿ ನಿಯಂತ್ರಣದ ಬಗ್ಗೆ ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ ಅವರು, ‘ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಡೆಂಗಿ ದೃಢ ಪ್ರಕರಣಗಳ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಕಳೆದ ಸಾಲಿಗೆ ಹೋಲಿಸಿದರೆ ಈ ಬಾರಿ ಡೆಂಗಿ ಪರೀಕ್ಷೆ ಪ್ರಮಾಣ ಶೇ 42ರಷ್ಟು ಹೆಚ್ಚಳವಾಗಿದೆ. ಸಾಧ್ಯವಾದಷ್ಟು ಮುಂಚಿತವಾಗಿ ಡೆಂಗಿ ಪ್ರಕರಣಗಳು ದೃಢಪಟ್ಟರೆ ರೋಗಿಗಳ ಪ್ರಾಣಕ್ಕೆ ಅಪಾಯವಾಗುವುದನ್ನು ತಡೆಯಬಹುದು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು’ ಎಂದು ಸೂಚನೆ ನೀಡಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಜನವರಿ ತಿಂಗಳಿನಿಂದ ಜೂನ್ ಅಂತ್ಯದವರೆಗೆ 6,187 ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಶೇ 66ರಷ್ಟು ಪ್ರಕರಣಗಳು ಗ್ರಾಮೀಣ ಪ್ರದೇಶದಲ್ಲಿ ವರದಿಯಾದರೆ, ಶೇ 44ರಷ್ಟು ಪ್ರಕರಣಗಳು ನಗರ ಪ್ರದೇಶದಲ್ಲಿ ದೃಢಪಟ್ಟಿವೆ. ಡೆಂಗಿಯಿಂದ ಈವರೆಗೆ ಆರು ಜನರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ಶೇ 0.09ರಷ್ಟಿದೆ. ಸಾವು ತಡೆಯಲು ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಚಿತ್ರದುರ್ಗ, ಶಿವಮೊಗ್ಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗಿ ವರದಿಯಾಗಿವೆ. ಬಸ್ ಡಿಪೊಗಳಲ್ಲಿ ಬಿದ್ದಿರುವ ಟಯರ್‌ಗಳಲ್ಲಿ ನೀರು ನಿಂತು, ಲಾರ್ವಾ ಉತ್ಪತ್ತಿಯಾಗುತ್ತಿರುವುದು ಪರೀಕ್ಷೆಯಿಂದ ದೃಢಪಟ್ಟಿದೆ. ಎಲ್ಲ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದರು.

ಡೆಂಗಿ ಬಗ್ಗೆ ಜಾಗೃತಿ: ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಈಡಿಸ್ ಸೊಳ್ಳೆ ಹಾಗೂ ಲಾರ್ವಾದ ಬಗ್ಗೆ ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚಿಸಿದರು.

ಬಿಬಿಎಂಪಿ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗೂ ಭೇಟಿ ನೀಡಿ, ಡೆಂಗಿ ಬಗ್ಗೆ ಜನರಿಗೆ ತಿಳಿ ಹೇಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ಪ್ರತಿಯೊಂದು ಶಾಲೆಗೂ ಭೇಟಿ ನೀಡಿ, ಮಕ್ಕಳಲ್ಲಿ ಡೆಂಗಿ ಬಗ್ಗೆ ಜಾಗೃತಿ ಮೂಡಿಸಬೇಕು. ಶಿಕ್ಷಕರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ವೈದ್ಯಾಧಿಕಾರಿಗಳೇ ಮೇಲ್ವಿಚಾರಣೆ ಮಾಡಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಪ್ರತಿ ಶುಕ್ರವಾರ ಡೆಂಗಿ ನಿಯಂತ್ರಣ ಅಭಿಯಾನ ನಡೆಸಬೇಕು. ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳು ಪ್ರತಿ ಶುಕ್ರವಾರ ಕಾರ್ಯಕ್ಷೇತ್ರದಲ್ಲಿ ಇರಬೇಕು ಎಂದು ಸಚಿವರು ಸೂಚಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.