ಬೆಂಗಳೂರು: ‘ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮೂರು ದಶಕಗಳಿಂದ ಹೋರಾಟ ನಡೆಸಿದರೂ ಮಾದಿಗ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ’ ಎಂದು ಆದಿಜಾಂಬವ ಕೋಡಿಹಳ್ಳಿ ಬೃಹನ್ಮಠದ ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ 8ನೇ ದಿನದ
ಅನಿರ್ದಿಷ್ಟಾವಧಿ ಧರಣಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
‘ಪರಿಶಿಷ್ಟ ಜಾತಿಯಲ್ಲಿನ ಮಾದಿಗ ಸಮುದಾಯಕ್ಕೆ ಎಲ್ಲ ಕ್ಷೇತ್ರಗಳಲ್ಲೂ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ
ಅನಿವಾರ್ಯವಾಗಿದೆ’ ಎಂದು ಪ್ರತಿಪಾದಿಸಿದರು.
‘ಒಳ ಮೀಸಲಾತಿ ಬೇಡಿಕೆ ಆಧರಿಸಿ ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ರಚನೆ ಮಾಡಿತ್ತು. ಬಿಜೆಪಿ ಸರ್ಕಾರ ವರದಿ ಸ್ವೀಕರಿಸಿ ಸುಮ್ಮನಾಯಿತು. ಇನ್ನು ಜೆಡಿಎಸ್ ಪಕ್ಷ ನಮ್ಮ ಹಕ್ಕೊತ್ತಾಯದ ಬಗ್ಗೆ ಗಮನವನ್ನೇ ಹರಿಸಿಲ್ಲ’ ಎಂದು ಸ್ವಾಮೀಜಿ ಹೇಳಿದರು.
‘ಬೇರೆಯವರ ತಟ್ಟೆಗೆ ನಾವು ಕೈ ಹಾಕುವುದಿಲ್ಲ. ನಮಗೆ ಸಿಗಬೇಕಾದ ಅನ್ನವನ್ನು ಉಂಡ ಜನರೇ ಈಗಲಾ ದರೂ ಒಳ ಮೀಸಲಾತಿಗೆ ಅವಕಾಶ ಕೊಡಬೇಡಿ, ನಮ್ಮ ಹೋರಾಟ ಅನ್ಯ ಪರಿಶಿಷ್ಟರ ವಿರುದ್ಧ ಅಲ್ಲ, ಅನ್ಯಾಯದ ವಿರುದ್ಧ. ಸದಾಶಿವ ಆಯೋಗದ ವರದಿಯನ್ನುಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರ ಮಂಡಿಸಬೇಕು. ಚರ್ಚೆ ನಡೆಸಿ ಕೇಂದ್ರಕ್ಕೆ ಕಳುಹಿಸಬೇಕು’ ಎಂದು ಸ್ವಾಮೀಜಿ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.