ADVERTISEMENT

ಲಸಿಕೆ ಪಡೆಯದಿದ್ದರೆ ಚಿಕಿತ್ಸೆ ವೆಚ್ಚ ಭರಿಸಬೇಡಿ: ಎನ್‌.ಮಂಜುನಾಥ್‌ ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2021, 18:46 IST
Last Updated 13 ಫೆಬ್ರುವರಿ 2021, 18:46 IST
ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌
ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌    

ಬೆಂಗಳೂರು: ‘ಕೋವಿಡ್‌ ನಿಯಂತ್ರಣ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಸರ್ಕಾರ ಉಚಿತವಾಗಿ ಕೋವಿಡ್ ಲಸಿಕೆ ನೀಡುತ್ತಿದ್ದರೂ ಅನೇಕರು ಲಸಿಕೆ ಹಾಕಿಸಿಕೊಂಡಿಲ್ಲ. ಲಸಿಕೆ ಪಡೆಯದವರಿಗೆ ಕೋವಿಡ್ ಬಂದರೆ ಅವರ ಚಿಕಿತ್ಸೆ ವೆಚ್ಚ ಭರಿಸಬಾರದು ಎಂದು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ’ ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ಸರ್ಕಾರಿ ನೌಕರರು ಕೋವಿಡ್‌ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಕೋವಿಡ್ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿದ್ದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಎರಡನೇ ಹಂತದ ಅಭಿಯಾನದಲ್ಲಿ ಲಸಿಕೆ ನೀಡಲಾಗುತ್ತಿದೆ. ಪಾಲಿಕೆಯ 33 ಸಾವಿರ ಸಿಬ್ಬಂದಿ, ಕಂದಾಯ ಹಾಗೂ ಪೊಲೀಸ್ ಇಲಾಖೆಗಳ 27 ಸಾವಿರ ಸಿಬ್ಬಂದಿ ಸೇರಿದಂತೆ 60 ಸಾವಿರ ಮಂದಿ ಲಸಿಕೆ ಪಡೆಯಲು ಕೋವಿನ್ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಐದು ದಿನಗಳಿಂದ ಎರಡನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿದೆಯಾದರೂ, ಶೇ 35ರಷ್ಟು ಸಿಬ್ಬಂದಿಯೂ ಗೊತ್ತುಪಡಿಸಿದ ದಿನದಂದು ಲಸಿಕೆ ಹಾಕಿಸಿಕೊಂಡಿಲ್ಲ.

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಮೊದಲನೇ ಹಂತದ ಕೋವಿಡ್‌ ಲಸಿಕೆ ಅಭಿಯಾನದಲ್ಲಿ 1,83,000 ಆರೋಗ್ಯ ಕಾರ್ಯಕರ್ತರು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ 80 ಸಾವಿರ ಮಂದಿ ಮಾತ್ರ ಲಸಿಕೆ ಪಡೆದಿದ್ದರು. ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.