ಬೆಂಗಳೂರು: ಮದ್ಯ ಸೇವಿಸಿ ಬಸ್ ಸೇರಿದಂತೆ ಶಾಲಾ ವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ ನಡೆಸಲಾಗಿದೆ ಎಂದು ನಗರದ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ.
ಜ.23ರಂದು 3,414 ವಾಹನಗಳ ತಪಾಸಣೆ ಮಾಡಿ, ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದ 16 ಚಾಲಕರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಫೆಬ್ರುವರಿ 22ರಂದು 2,059 ವಾಹನಗಳನ್ನು ತಪಾಸಣೆ ಮಾಡಿ, ಏಳು ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಅಲ್ಲದೇ, ಜುಲೈ 9ರಂದು 3,016 ಶಾಲಾ ವಾಹನ ತಪಾಸಣೆ ನಡೆಸಿ, 23 ಮಂದಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ಆಗಸ್ಟ್ 4ರಂದು ವಿಶೇಷ ಕಾರ್ಯಾಚರಣೆ ನಡೆಸಿ, 3,676 ಚಾಲಕರನ್ನು ತಪಾಸಣೆಗೆ ಒಳಪಡಿಸಿ 26 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ವಿದ್ಯಾರ್ಥಿಗಳ ಸುರಕ್ಷತೆಯು ಸಂಚಾರ ಪೊಲೀಸರ ಆದ್ಯತೆಯಾಗಿದ್ದು, ಈ ಕಾರ್ಯಾಚರಣೆ ಮುಂದುವರಿಸಲಾಗುವುದು. ಸಂಚಾರ ನಿಯಮ ಉಲ್ಲಂಘಿಸುವವರ ಹಾಗೂ ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುತ್ತಿದೆ. ಚಾಲಕರು ಸಂಚಾರ ನಿಯಮ ಪಾಲಿಸುತ್ತಿರುವ ಬಗ್ಗೆ ಶಾಲಾ– ಕಾಲೇಜುಗಳ ಆಡಳಿತ ಮಂಡಳಿ ಹಾಗೂ ಪೋಷಕರು ಖಾತ್ರಿ ಪಡಿಸಿಕೊಳ್ಳಬೇಕು. ಸುರಕ್ಷತೆ ನಿಯಮ ಉಲ್ಲಂಘನೆ ಕಂಡುಬಂದರೆ ಮಾಹಿತಿ ನೀಡಬೇಕು ಎಂದು ಸಂಚಾರ ಪೊಲೀಸರು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.