ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರನ್ನು ಒಳಗೊಳ್ಳುವ ಆಯೋಗ ರಚಿಸುವಂತೆ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಗೌರವಾಧ್ಯಕ್ಷ ಸಿ.ಎಸ್.ದ್ವಾರಕನಾಥ್ ಅವರು ಸರ್ಕಾರವನ್ನು ಒತ್ತಾಯಿಸಿದರು.
ಶಾಸಕರ ಭವನದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಅಲೆಮಾರಿ ಸಮುದಾಯಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅಲೆಮಾರಿ ಸಮುದಾಯದ ಜನಸಂಖ್ಯೆ 50 ಲಕ್ಷದಷ್ಟಿದೆ. ಅಲೆಮಾರಿ, ಆದಿವಾಸಿ ಸಮುದಾಯ ಶೈಕ್ಷಣಿಕ, ರಾಜಕೀಯ, ಸಾಮಾಜಿಕವಾಗಿ ಹಿಂದುಳಿದಿದೆ. ಭೂಮಿ, ನಿವೇಶನ, ವಸತಿ ಸೇರಿದಂತೆ ಇತರೆ ಮೂಲ
ಸೌಲಭ್ಯದಿಂದ ವಂಚಿತರಾಗಿದ್ದಾರೆ. ಎಲ್ಲ
ರನ್ನೂ ಒಳಗೊಂಡ ಆಯೋಗ ರಚಿಸಿದರೆ ಅಲೆಮಾರಿ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ₹1 ಸಾವಿರ ಕೋಟಿ ಅನುದಾನ ಮೀಸಲಿಡಬೇಕು ದ್ವಾರಕನಾಥ್ ಹೇಳಿದರು. ಇದೇ ವೇಳೆ, ಸಮುದಾಯದ ಬೇಡಿಕೆ ಈಡೇರಿಕೆಗಾಗಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಮುದಾಯದ ಮುಖಂಡರು ಆಗ್ರಹಿಸಿದರು.
ರಾಯಚೂರು ಜಿಲ್ಲೆಯ ಮುಖಂಡ ಶ್ರೀನಿವಾಸ್ ಹಾಗೂ ಬೆಳಗಾವಿಯ ಮಾರುತಿ ಮಾತನಾಡಿ,‘ಸಮುದಾಯದವರು ಭಿಕ್ಷಾಟನೆ ಮಾಡಿ ಜೀವನ ನಡೆಸುತ್ತಿದ್ದಾರೆ. ಸಾಲ ಸೌಲಭ್ಯ, ಭೂಮಿ, ಜಾತಿ ಪ್ರಮಾಣ ಪತ್ರ ಸಿಗುತ್ತಿಲ್ಲ. ರಾಜ್ಯಮಟ್ಟದಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಬೇಕು’ ಎಂದು ಸಲಹೆ ನೀಡಿದರು.
ಧಾರಾವಾಡ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ, ‘ಜಿಲ್ಲೆಗೊಂದು ಅಲೆಮಾರಿ ಸಮುದಾಯ ಭವನ ನಿರ್ಮಿಸಬೇಕು. ಕುಲಶಾಸ್ತ್ರೀಯ ಅಧ್ಯಯನ ನಡೆಸಬೇಕು’ ಎಂದರು. ಮಹಾಸಭಾದ ಅಧ್ಯಕ್ಷ ಬಿ.ಎಲ್.ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ನಾಗರಾಜು, ಕಾರ್ಯಾಧ್ಯಕ್ಷೆ ಫರ್ಜಾನಾ, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.