ಬೆಂಗಳೂರು: ಅಧಿಕಾರಿಗಳು ಮಾಡುವ ತಪ್ಪನ್ನು ಎತ್ತಿ ತೋರಿಸುವ ಕೆಲಸವನ್ನು ಮಾಹಿತಿ ಹಕ್ಕು ಕಾರ್ಯಕರ್ತರು ಮಾಡಬೇಕು. ಆ ಮೂಲಕ ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ತಿಳಿಸಿದರು.
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಗುರುವಾರ ಹಮ್ಮಿಕೊಂಡಿದ್ದ ಮಾಹಿತಿ ಹಕ್ಕು ದಿನಾಚರಣೆ ಹಾಗೂ ಸಂಘಟನೆಯ ಐದನೇ ವಾರ್ಷಿಕೋತ್ಸವದಲ್ಲಿ ಅವರು ಮಾತನಾಡಿದರು.
‘ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕೆಲಸ ನಿಮ್ಮಿಂದ ಆಗುತ್ತಿದೆ. ಸಂಪೂರ್ಣವಾಗಿ ನಿಲ್ಲುವವರೆಗೆ ಆಂದೋಲನ ನಡೆಯಬೇಕು. ಮಾಹಿತಿ ಹಕ್ಕು ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸಬೇಕು. ಅವರಲ್ಲಿ ಕಾನೂನಿನ ಅರಿವು ಬೆಳೆಸಬೇಕು’ ಎಂದು ಸಲಹೆ ನೀಡಿದರು.
ಭ್ರಷ್ಟ ವ್ಯವಸ್ಥೆ ಹೆಮ್ಮರವಾಗಿ ಬೆಳೆದಿದೆ. ಲಂಚವಿಲ್ಲದೇ ಯಾವುದೇ ಕೆಲಸಗಳಾಗುತ್ತಿಲ್ಲ. ರಾಜಕಾರಣಿಗಳ ಮಕ್ಕಳೇ ರಾಜಕಾರಣಿಗಳಾಗುತ್ತಿದ್ದಾರೆ. ಇವೆಲ್ಲದಕ್ಕೂ ಕಡಿವಾಣ ಹಾಕದೇ ಇದ್ದರೆ ಉತ್ತಮ ಸಮಾಜ ಕಟ್ಟಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಬೆಟ್ಟಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಗ್ರಾಮ ಪಂಚಾಯಿತಿಯಿಂದ ಪ್ರಾರಂಭ ಮಾಡಿ ವಿಧಾನಸೌಧದವರೆಗೆ ಭ್ರಷ್ಟಾಚಾರ ನಿರ್ಮೂಲನೆ ಅಭಿಯಾನ ಶುರು ಮಾಡಬೇಕು. ಸಾಮಾಜಿಕ ಹೋರಾಟಗಾರರು, ಮಾಹಿತಿ ಹಕ್ಕು ಕಾರ್ಯಕರ್ತರು ಪ್ರಾಮಾಣಿಕ ಹೋರಾಟ ಮಾಡಬೇಕು’ ಎಂದು ಹೇಳಿದರು.
ಸರ್ಕಾರದ ಖಜಾನೆಗೆ ಅಧಿಕಾರಿಗಳಿಂದ ದಂಡ ತುಂಬಿಸಿದ ಸಾಮಾಜಿಕ ಕಾರ್ಯಕರ್ತರಿಗೆ ‘ವಿಚಾರಕ್ರಾಂತಿ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ್ ಬೆಳ್ಳೂರ್, ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಚ್.ಜಿ. ರಮೇಶ್ ಕುಣಿಗಲ್, ರಾಜ್ಯ ಘಟಕದ ಅಧ್ಯಕ್ಷ ಚನ್ನಯ್ಯ ಎಂ. ವಸ್ತ್ರದ್, ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಮೋಹನ್ ಟಿ., ಸಂಘಟನೆಯ ಓಂಕಾರಪ್ಪ, ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.