ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಆಡಿಯೊ ಹರಿ ಬಿಡುವ ಮೂಲಕ ತಮ್ಮ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವಂತೆ ತಾವು ಹೇಳಿದ್ದಾಗಿ ನಕಲಿ ಆಡಿಯೊವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದರಿಂದ ನನ್ನ ಘನತೆಗೆ ಧಕ್ಕೆಯುಂಟಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ನಕಲಿ ಆಡಿಯೊ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದ ಶಿವಲಿಂಗೇಗೌಡ ಅವರು, ಅರಸೀಕೆರೆ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದಾರೆ. ಸದ್ಯ, ರಾಜ್ಯ ಗೃಹಮಂಡಳಿ ಅಧ್ಯಕ್ಷರಾಗಿದ್ದಾರೆ.
‘ಚುನಾವಣೆ ನಡೆದು ಆರು ತಿಂಗಳು ಆಗಿದೆ. ಯಾವ ಉದ್ದೇಶದಿಂದ ನಕಲಿ ಆಡಿಯೊ ಜಾಲತಾಣದಲ್ಲಿ ಹರಿಬಿಡಲಾಗಿದೆ? ಯಾರು ಈ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಮಾತನಾಡಿರುವುದೇ ಒಂದು. ಅದಕ್ಕೆ ಸಂಬಂಧವಿಲ್ಲದ ಮತ್ತೊಂದು ಆಡಿಯೊವನ್ನು ಸೇರಿಸಲಾಗಿದೆ. ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ’ ಎಂದು ಶಿವಲಿಂಗೇಗೌಡ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.