ಬೆಂಗಳೂರು: ಫಲವತ್ತಾದ ಕೃಷಿ ಜಮೀನುಗಳನ್ನು ಭೂಸ್ವಾಧೀನ ಮಾಡಿಕೊಳ್ಳುತ್ತಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ(ಕೆಐಎಡಿಬಿ) ಕ್ರಮ ಖಂಡಿಸಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಹ್ಯಾಡಾಳ ಹಾಗೂ ಗೋಕರೆ ಬಚ್ಚಹಳ್ಳಿಯ ರೈತರು ಸಚಿವ ಕೆ.ಎಚ್.ಮುನಿಯಪ್ಪ ನಿವಾಸದ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ಚನ್ನರಾಯಪಟ್ಟಣದ ನಾಡಕಚೇರಿ ಎದುರು 949 ದಿನಗಳಿಂದ ನಿರಂತರ ಧರಣಿ ನಡೆಸಿದ್ದರೂ ಭೂಸ್ವಾಧೀನ ಪ್ರಕ್ರಿಯೆ ಕೈಬಿಟ್ಟಿಲ್ಲ. ಎರಡು ಗ್ರಾಮದ ಕೆಲವು ರೈತರಿಗೆ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ. ರೈತರ ಜಮೀನನ್ನು ರೈತರಿಗೇ ಉಳಿಸಬೇಕು ಎಂದು ಪ್ರತಿಭಟನಕಾರರು ಭಿತ್ತಿಪತ್ರ ಹಿಡಿದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ‘ಕಾಂಗ್ರೆಸ್ ಸರ್ಕಾರವು ಕೊಟ್ಟ ಮಾತು ತಪ್ಪಿದೆ’ ಎಂದು ಆಪಾದಿಸಿದರು.
‘ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ 13 ಹಳ್ಳಿಯ 1,779 ಎಕರೆಯನ್ನು ಕೈಗಾರಿಕೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲು ಕೆಐಎಡಿಬಿ ನೋಟಿಸ್ ಜಾರಿ ಮಾಡಿತ್ತು. ನೋಟಿಸ್ ಜಾರಿಯಾದ ಬೆನ್ನಲ್ಲೇ ಹೋರಾಟ ನಡೆಸಿದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕಳೆದ ವಿಧಾನಸಭೆ ಚುನಾವಣೆ ವೇಳೆ ಪ್ರಚಾರಕ್ಕೆ ಬಂದಿದ್ದ ಕೆ.ಎಚ್.ಮುನಿಯಪ್ಪ ಅವರು ಯಾವುದೇ ಕಾರಣಕ್ಕೂ ಕೃಷಿ ಜಮೀನನ್ನು ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರು. ಸಿದ್ದರಾಮಯ್ಯ ಅವರೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲಾಗುವುದು ಎಂದು ಆಶ್ವಾಸನೆ ನೀಡಿದ್ದರು. ಇದೀಗ ಎರಡು ಗ್ರಾಮದ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಪ್ರತಿಭಟನಕಾರರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.