ಬೆಂಗಳೂರು: ಮಾಜಿ ಸಚಿವ ಆರ್. ಶಂಕರ್ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅವರ ಹಲವು ಬೆಂಬಲಿಗರೂ ಕಾಂಗ್ರೆಸ್ ಪಕ್ಷ ಸೇರಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಬಾವುಟ ನೀಡುವ ಮೂಲಕ ಶಂಕರ್ ಮತ್ತು ಅವರ ಬೆಂಬಲಿಗರನ್ನು ಸ್ವಾಗತಿಸಿದರು.
ಶಂಕರ್ 2018ರ ವಿಧಾನಸಭಾ ಚುನಾವಣೆಯಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ತಮ್ಮದೇ ನಾಯಕತ್ವದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಸ್ಪರ್ಧಿಸಿ ಸಚಿವರಾಗಿದ್ದರು. ನಂತರ ತಮ್ಮ ಪಕ್ಷವನ್ನು ಕಾಂಗ್ರೆಸ್‌ನಲ್ಲಿ ವಿಲೀನಗೊಳಿಸಿ, ಜೆಡಿಎಸ್– ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.
ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಉಪ ಚುನಾವಣೆ ಬಳಿಕ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು.
2023ರ ವಿಧಾನಸಭಾ ಚುನಾವಣೆಯಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈತಪ್ಪಿದ ಬಳಿಕ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸೇರಿದ್ದರು. ಎನ್‌ಸಿಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.