ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೆಸರು ಬಳಸಿ ಸರ್ಕಾರಿ ಅಧಿಕಾರಿಗಳನ್ನು ಬೆದರಿಸಿ ವಂಚಿಸುತ್ತಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತುಮಕೂರಿನ ರಘುನಾಥ್ ಬಂಧಿತ ಆರೋಪಿ.
‘ಶನಿವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಕಳುಹಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಉಪ ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ಹಾಗೂ ಆಪ್ತ ಕಾರ್ಯದರ್ಶಿ ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ಆರೋಪಿ ವಂಚಿಸುತ್ತಿದ್ದ’ ಎಂದು ಪೊಲೀಸರು ಹೇಳಿದರು.
‘ಪಂಚಾಯತ್ ರಾಜ್ ಇಲಾಖೆಯ ಚಳ್ಳಕೆರೆ ಉಪ ವಿಭಾಗದ ಎಂಜಿನಿಯರ್ ಎನ್.ಕಾವ್ಯಾ ಅವರು ಸ್ಥಳ ನಿರೀಕ್ಷಣೆಯಲ್ಲಿ ಇದ್ದರು. ಈ ಮಾಹಿತಿ ತಿಳಿದಿದ್ದ ಆರೋಪಿ ಅ.14ರಂದು ಕರೆ ಮಾಡಿ, ಪ್ರಿಯಾಂಕ್ ಖರ್ಗೆ ಅವರ ಆಪ್ತ ಸಹಾಯಕ ಹಾಗೂ ವಿಶೇಷಾಧಿಕಾರಿ ಎಂದು ಕಾವ್ಯಾ ಅವರ ಬಳಿ ಪರಿಚಯಿಸಿಕೊಂಡಿದ್ದ. ಕಾವ್ಯಾ ಅವರ ವರ್ಗಾವಣೆಗೆ ಸಂಬಂಧಿಸಿದಂತೆ ₹2 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಸಿದ್ದ. ನಂತರ, ಯುಪಿಐ ಮೂಲಕ ₹80 ಸಾವಿರ ಪಡೆದಿದ್ದ’ ಎಂದು ಪೊಲೀಸರು ಹೇಳಿದರು.
ಪ್ರಿಯಾಂಕ್ ಖರ್ಗೆ ಅವರ ಹೆಸರು ಬಳಸಿ ವ್ಯಕ್ತಿಯೊಬ್ಬ ಹಣ ವಸೂಲಿ ಮಾಡುತ್ತಿದ್ದಾನೆ ಎಂದು ಆರೋಪಿಸಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ನಾಗರಾಜ್ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.