ADVERTISEMENT

ಒಂಬತ್ತು ಕಾಯ್ದೆಗಳ ಜಾರಿಗೆ ಅಧಿಸೂಚನೆ ಹೊರಡಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 23:30 IST
Last Updated 10 ಜೂನ್ 2024, 23:30 IST
<div class="paragraphs"><p>ವಿಧಾನಸೌಧ ( ಸಾಂದರ್ಭಿಕ ಚಿತ್ರ)</p></div>

ವಿಧಾನಸೌಧ ( ಸಾಂದರ್ಭಿಕ ಚಿತ್ರ)

   

ಬೆಂಗಳೂರು: ವಕೀಲರ ಮೇಲಿನ ಹಿಂಸೆ ತಡೆ ಕಾಯ್ದೆ, ವಿಧಾನಸಭಾ ಕ್ಷೇತ್ರದಲ್ಲಿ ಒಂದಕ್ಕಿಂತ ಹೆಚ್ಚು ಬಗರ್‌ ಹುಕುಂ ಸಮಿತಿಗಳನ್ನು ನೇಮಿಸುವುದಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ಕಾಯ್ದೆ ಸೇರಿದಂತೆ ಒಂಬತ್ತು ಕಾಯ್ದೆಗಳ ಜಾರಿಗೆ ಸೋಮವಾರ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ವಿಧಾನಮಂಡಲದ ಬಜೆಟ್‌ ಅಧಿವೇಶನದಲ್ಲಿ ಈ ಮಸೂದೆಗಳಿಗೆ ಒಪ್ಪಿಗೆ ನೀಡಲಾಗಿತ್ತು. ರಾಜ್ಯಪಾಲರು ಮಾರ್ಚ್‌ನಲ್ಲೇ ಈ ಮಸೂದೆಗಳಿಗೆ ಅಂಕಿತ ಹಾಕಿದ್ದರು. ಆದರೆ, ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿದ್ದ ಕಾರಣದಿಂದ ರಾಜ್ಯಪತ್ರದಲ್ಲಿ ಪ್ರಕಟಿಸಿರಲಿಲ್ಲ. ನೀತಿಸಂಹಿತೆ ಸಡಿಲಿಕೆ ಆದ ಬಳಿಕ ಅಧಿಸೂಚನೆ ಪ್ರಕಟಿಸಲಾಗಿದೆ.

ADVERTISEMENT

ಕರ್ನಾಟಕ ಸಿವಿಲ್‌ ಎಂಜಿನಿಯರ್‌ಗಳ ಕಾಯ್ದೆ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ, ಅಂತರ್‌ ವಿಷಯ ಆರೋಗ್ಯ ವಿಜ್ಞಾನಗಳು ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (ತಿದ್ದುಪಡಿ) ಕಾಯ್ದೆ, ಕರಾವಳಿ ಅಭಿವೃದ್ಧಿ ಮಂಡಳಿ ಕಾಯ್ದೆ, ಕರ್ನಾಟಕ ಮುದ್ರಾಂಕ (ತಿದ್ದುಪಡಿ) ಕಾಯ್ದೆ ಮತ್ತು ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ (ತಿದ್ದುಪಡಿ) ಕಾಯ್ದೆಗಳನ್ನು ಸೋಮವಾರದಿಂದ ಜಾರಿಗೊಳಿಸಲಾಗಿದೆ.

ಮೂರು ಮಸೂದೆಗಳಿಗೆ ಅಂಕಿತ ಬಾಕಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡಗಳ ನೆಲ ವಿಸ್ತೀರ್ಣ ಅನುಪಾತ (ಎಫ್‌ಎಆರ್‌) ಹೆಚ್ಚಳಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ– 2024’, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರು, ಸಲಹೆಗಾರರನ್ನು ಅನರ್ಹತೆಯಿಂದ ರಕ್ಷಿಸುವ ‘ಕರ್ನಾಟಕ ವಿಧಾನಮಂಡಲ (ಅನರ್ಹತೆ ತಡೆ) (ತಿದ್ದುಪಡಿ) ಮಸೂದೆ– 2024 ಮತ್ತು ‘ಗದಗ–ಬೆಟಗೇರಿ ವ್ಯವಹಾರ, ಸಂಸ್ಕೃತಿ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರ ಮಸೂದೆ–2023’ಕ್ಕೆ ರಾಜ್ಯಪಾಲರು ಅಂಕಿತ ಹಾಕಿಲ್ಲ. ಮೂರೂ ಮಸೂದೆಗಳು ರಾಜಭವನದಲ್ಲಿ ಬಾಕಿ ಉಳಿದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.