ADVERTISEMENT

‘ಅಲೆಮಾರಿ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಿ’

​ಪ್ರಜಾವಾಣಿ ವಾರ್ತೆ
Published 16 ಮೇ 2024, 15:44 IST
Last Updated 16 ಮೇ 2024, 15:44 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬೆಂಗಳೂರು: ‘ಎಸ್ಸಿ–ಎಸ್ಟಿ ಅಲೆಮಾರಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡದೇ ಅನ್ಯಾಯ ಮಾಡಲಾಗಿದೆ. ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ ಸಮುದಾಯದವರನ್ನು ಗುರುತಿಸಿ ನಾಮನಿರ್ದೇಶನ ಮಾಡಬೇಕು’ ಎಂದು ಎಸ್‌.ಸಿ– ಎಸ್.ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆದರ್ಶ್ ಯಲ್ಲಪ್ಪ, ‘ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಘಟಕಗಳನ್ನು ರಚಿಸಬೇಕು. ರಾಜ್ಯದಲ್ಲಿ ಅವಕಾಶ ವಂಚಿತ ಎಸ್‌.ಸಿಗೆ ಸೇರಿದ 51 ಹಾಗೂ ಎಸ್‌.ಟಿಗೆ 23 ಅಲೆಮಾರಿ ಜಾತಿಗಳಿದ್ದು, 25 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಇದೆ. ಈ ಸಮುದಾಯಗಳು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿವೆ’ ಎಂದರು.

ADVERTISEMENT

‘ರಾಜ್ಯದಲ್ಲಿ ನಮ್ಮ ಸಮುದಾಯದವರಿಗೆ ರಾಜಕೀಯ ಪ್ರಾತಿನಿಧ್ಯವೇ ಸಿಕ್ಕಿಲ್ಲ. ಸಮುದಾಯದಲ್ಲಿ ಸಂಘಟಕರು, ವಿದ್ವಾಂಸರು, ತಜ್ಞರು, ಅನುಭವಿಗಳು ಇದ್ದರೂ ಸಹ, ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆ ಆಗಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.

‘ಇತ್ತೀಚೆಗೆ ಎಸ್.ಸಿ ಎಸ್‌.ಟಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ. ಆದರೆ, ಸಮರ್ಪಕ ಅನುದಾನ ನೀಡದೇ ವಂಚಿಸಲಾಗಿದೆ. ಅಲೆಮಾರಿಗಳ ಹೆಸರಿನಲ್ಲಿ ಅಲೆಮಾರಿ ಸಮುದಾಯಕ್ಕೆ ಸೇರದ ವ್ಯಕ್ತಿಗಳು ನಮ್ಮ ಅವಕಾಶಗಳನ್ನು ಕಬಳಿಸಲು ಹೊಂಚು ಹಾಕುತ್ತಿರುವುದು ಖಂಡನೀಯ’ ಎಂದರು. 

ಒಕ್ಕೂಟದ ಕಾರ್ಯಾಧ್ಯಕ್ಷ ವೆಂಕಟೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.