ADVERTISEMENT

ವಾಲ್ಮೀಕಿ ನಿಗಮದ ಹಗರಣ | ಎಸ್‌ಐಟಿ ತನಿಖೆ ಮೇಲೆ ವಿಶ್ವಾಸವಿದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 21:07 IST
Last Updated 19 ಜುಲೈ 2024, 21:07 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ವಿಶೇಷ ತನಿಖಾ ದಳ (ಎಸ್‌ಐಟಿ) ನಡೆಸುತ್ತಿರುವ ತನಿಖೆಯ ಮೇಲೆ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಪಿ. ಚಂದ್ರಶೇಖರನ್‌ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೇ 31ರಂದು ನಾಲ್ವರು ಐಪಿಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ತನಿಖಾ ತಂಡವು ಈವರೆಗೆ 12 ಜನರನ್ನು ಬಂಧಿಸಿ, ₹ 34 ಕೋಟಿ ಮೌಲ್ಯದ ನಗದು, ಇತರ ಸ್ವತ್ತುಗಳನ್ನು ವಶಕ್ಕೆ ಪಡೆದಿದೆ. ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿದೆ’ ಎಂದರು.

ಸರ್ಕಾರಿ ಅಧಿಕಾರಿಯಲ್ಲ: ಈ ಪ್ರಕರಣದಲ್ಲಿ ಶಿವಕುಮಾರ್‌ ಎಂಬ ಹೆಸರಿನಲ್ಲಿ ನಿಗಮದ ಕಿರಿಯ ಲೆಕ್ಕಾಧಿಕಾರಿ ಎಂದು ಬಿಂಬಿಸಿಕೊಂಡು ಬ್ಯಾಂಕ್‌ ಖಾತೆಯ ನಿರ್ವಹಣೆಯ ಅಧಿಕಾರ ಪಡೆದಿದ್ದವರು ಸರ್ಕಾರಿ ನೌಕರನೇ ಅಲ್ಲ. ಹೈದರಾಬಾದ್‌ನ ಸಾಯಿತೇಜ ಎಂಬಾತನನ್ನೇ ಶಿವಕುಮಾರ್‌ ಎಂದು ಬಿಂಬಿಸಿ, ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಎಸಗಿರುವುದು ಎಸ್‌ಐಟಿ ತನಿಖೆಯಲ್ಲಿ ಪತ್ತೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.