ಬೆಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರವು ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಧಾನಸಭೆಯಲ್ಲಿ ಮಂಗಳವಾರ ಭರವಸೆ ನೀಡಿದರು.
ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ‘ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಂಬಂಧ ಅಧ್ಯಯನ ನಡೆಸಲು ಹಿಂದಿನ ಸರ್ಕಾರವು ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಿತ್ತು. ಸಮಿತಿಯ ವರದಿ ಬಂದಿದ್ದು, ಕೆಲವು ಇಲಾಖೆಗಳ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಅಗತ್ಯವಿರುವ ಇಲಾಖೆಗಳಿಂದ ಅಭಿಪ್ರಾಯ ಪಡೆದು ನಿರ್ಣಯ ಕೈಗೊಳ್ಳುತ್ತೇವೆ’ ಎಂದರು.
‘ಪಶ್ಚಿಮ ಬಂಗಾಳ, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಹತ್ತಕ್ಕಿಂತ ಹೆಚ್ಚು ಅಧಿಕೃತ ಭಾಷೆಗಳಿವೆ. ರಾಜ್ಯದಲ್ಲಿ ತುಳು ಭಾಷೆಗೂ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯ ಡಿ. ವೇದವ್ಯಾಸ ಕಾಮತ್ ಕೂಡ ದನಿಗೂಡಿಸಿದರು.
ಸಭಾಧ್ಯಕ್ಷ ಯು.ಟಿ. ಖಾದರ್ ಕೂಡ ಮಧ್ಯ ಪ್ರವೇಶಿಸಿ, ಬೇಡಿಕೆಯ ಪರ ಮಾತನಾಡಿದರು. ಮೂವರೂ ಕೆಲಕಾಲ ತುಳು ಭಾಷೆಯಲ್ಲೇ ಮಾತು ಮುಂದುವರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.