ADVERTISEMENT

ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ: ದಿನೇಶ್ ಗುಡೂರಾವ್ ಸೂಚನೆ

ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಡೂರಾವ್ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 16:32 IST
Last Updated 20 ಜೂನ್ 2024, 16:32 IST
ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆಗೆ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆಗೆ ದಿನೇಶ್ ಗುಂಡೂರಾವ್ ಸಭೆ ನಡೆಸಿದರು.   

ಬೆಂಗಳೂರು: ‘ಗುಣಮಟ್ಟದ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಡೂರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ವಿವಿಧ ಕಾರ್ಯಕ್ರಮಗಳ ಅಧಿಕಾರಿಗಳೊಂದಿಗೆ ನಗರದಲ್ಲಿ ಗುರುವಾರ ಸಭೆ ನಡೆಸಿದ ಅವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

‘ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಜಾರಿಯಲ್ಲಿರುವ ಆರೋಗ್ಯ ಸೇವೆಗಳು ಹೆಚ್ಚು ಪ್ರಗತಿ ಕಂಡಿಲ್ಲ. ಹಲವು ಸೇವೆಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಂಡಿಲ್ಲ. ಯೋಜನೆಯಡಿ ದೊರೆಯುವ ಅನುದಾನವನ್ನು ಸಮರ್ಪಕವಾಗಿ ಬಳಿಸಿಕೊಂಡಿಲ್ಲ ಎಂದಾದರೆ ಆರೋಗ್ಯ ಸೇವೆಗಳು ಸಮರ್ಪಕವಾಗಿ ತಲುಪಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿ, ಹಲವು ಬಿಲ್‌ಗಳನ್ನು ಪಾವತಿಸದೆ ಬಾಕಿ ಇರಿಸಿಕೊಂಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. 

ADVERTISEMENT

‘ಲಭ್ಯವಿರುವ ಅನುದಾನವನ್ನು ಸರಿಯಾಗಿ ಖರ್ಚು ಮಾಡದಿದ್ದರೆ ಏನು ಪ್ರಯೋಜನ? ಟೆಂಡರ್ ಪ್ರಕ್ರಿಯೆಗಳನ್ನು ಮಾರ್ಚ್‌ವರೆಗೆ ಏಕೆ ಎಳೆದುಕೊಂಡು ಹೋಗುತ್ತಿದ್ದೀರಿ’ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದರು.‌

‘ಯಾವ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುವುದಿಲ್ಲವೊ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ನಾನು ಹಿಂಜರಿಯುವುದಿಲ್ಲ. ಯಾರ ಒತ್ತಡದಿಂದಲೂ ನಾನು ಅಧಿಕಾರಿಯನ್ನು ನೇಮಿಸಿಲ್ಲ. ಕಾರ್ಯದಕ್ಷತೆ ತೋರದಿರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ನಿರ್ಧಾರಗಳನ್ನ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಸ್ಪತ್ರೆಗಳಲ್ಲಿ ಕಾರ್ಯವೈಖರಿ, ಇ-ಆಫೀಸ್, ಟೆಲಿ ಐಸಿಯು, ಆಯುಷ್ಮಾನ್ ಭಾರತ್ ಯೋಜನೆಯ ರೆಫರೆಲ್ ಪದ್ಧತಿ ಬಗ್ಗೆ ಚರ್ಚಿಸಲು ಸಭೆ ಆಯೋಜಿಸುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ವ್ಯವಸ್ಥಾ‍ಪಕ ನಿರ್ದೇಶಕ ನವೀನ್ ಭಟ್, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.