ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಣಿ (94806 83972) ಆರಂಭಿಸಲಾಗಿದೆ ಎಂದು ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಕೃಷ್ಣಪ್ಪ ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಚಿಸಿರುವ ವಿಧಾನಸಭಾ ಕ್ಷೇತ್ರವಾರು ಸಮಿತಿಗಳ ಅಧ್ಯಕ್ಷ– ಉಪಾಧ್ಯಕ್ಷರು, ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದರು.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೃಷ್ಣಪ್ಪ, ‘ಗ್ಯಾರಂಟಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ಯಾರಂಟಿ ಯೋಜನೆ ಅನುಕೂಲ ಪಡೆಯಲು ಯಾವುದೇ ರೀತಿಯ ಸಮಸ್ಯೆಗಳನ್ನು ನಾಗರಿಕರು ಎದುರಿಸುತ್ತಿದ್ದರೆ ನಮ್ಮ ಸಹಾಯವಾಣಿಗೆ ಕರೆ ಮಾಡಿದರೆ, ಪರಿಹಾರ ನೀಡಲಾಗುತ್ತದೆ’ ಎಂದು ತಿಳಿಸಿದರು.
‘ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಸಮಿತಿಗಳನ್ನು ರಚಿಸಲಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ನಿಗಾವಹಿಸಲಾಗುತ್ತಿದೆ. ಈ ಎಲ್ಲ ಸಮಿತಿಗಳ ಅಧ್ಯಕ್ಷರೊಂದಿಗೆ ಇಂದು ಸಭೆ ನಡೆಸಲಾಗಿದ್ದು, ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಲಾಗುತ್ತದೆ. ಸಾರ್ವಜನಿಕರಿಂದ ಯಾವುದಾದರೂ ಅಹವಾಲು ಅಥವಾ ದೂರು ಬಂದರೆ ತಕ್ಷಣ ಸಂಬಂಧಪಟ್ಟ ಇಲಾಖೆಯ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುತ್ತದೆ. ಕುಂದುಕೊರತೆಗಳನ್ನು ಪರಿಶೀಲಿಸಿ, ಫಲಾನುಭವಿಗಳು ಯೋಜನೆಗಳಿಂದ ವಂಚಿತರಾಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಜನಾರ್ದನ್, ರಮೇಶ್ ಎಚ್., ನೌಶೀರ್ ಅಹ್ಮದ್, ಬಿ.ಎಸ್. ಗೋಪಾಲಕೃಷ್ಣ, 28 ವಿಧಾನಸಭಾ ಕ್ಷೇತ್ರಗಳ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ವಿಭಾಗದ ವಿಶೇಷ ಆಯುಕ್ತರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿ ಅವಿನಾಶ್ ಮೆನನ್ ರಾಜೇಂದ್ರನ್, ಗ್ಯಾರಂಟಿ ಯೋಜನೆಗಳಿಗೆ ಸಂಬಂಧಪಟ್ಟ ಇಲಾಖೆಗಳ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.