ADVERTISEMENT

ಜೆ.ಪಿ.ನಡ್ಡಾ, ಅಮಿತ್ ಮಾಳವೀಯ ವಿರುದ್ಧದ ತನಿಖೆಗೆ ಹೈಕೋರ್ಟ್ ಅನುಮತಿ

​ಪ್ರಜಾವಾಣಿ ವಾರ್ತೆ
Published 21 ಜೂನ್ 2024, 16:32 IST
Last Updated 21 ಜೂನ್ 2024, 16:32 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಮೇತರರ ಸಂಪತ್ತನ್ನು ಕಸಿದುಕೊಂಡು ತನ್ನ ಆಪ್ತವಾದ ಮುಸ್ಲಿಮ್‌ ಸಮುದಾಯಕ್ಕೆ ಹಂಚುತ್ತದೆ’ ಎಂಬ ಅನಿಮೇಟೆಡ್‌ ವಿಡಿಯೊವನ್ನು ಪಕ್ಷದ ಅಧಿಕೃತ ಸಾಮಾಜಿಕ ಜಾಲ ಖಾತೆಗಳಲ್ಲಿ ಪ್ರಚುರಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

ನಡ್ಡಾ ಮತ್ತು ಮಾಳವೀಯ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದೆ.

ADVERTISEMENT

ಈ ಸಂಬಂಧ ಕಲಬುರಗಿ ‘ಸೆನ್‌’ (ಸೈಬರ್, ಎಕನಾಮಿಕ್‌ ಅಂಡ್‌ ನಾರ್ಕೊಟಿಕ್‌ ಕ್ರೈಂ) ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಜೆ.ಪಿ.ನಡ್ಡಾ ಮತ್ತು ಮಾಳವೀಯ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ನಡ್ಡಾ ಪರ ವಕೀಲ ಎಂ.ವಿನೋದ್ ಕುಮಾರ್‌, ‘ಈ ಪ್ರಕರಣದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ–1951ರ ಕಲಂ 125 ಮಾತ್ರ ಅನ್ವಯಿಸುತ್ತದೆ. ಉಳಿದ ಕಲಂಗಳು ಅನ್ವಯವಾಗುವುದಿಲ್ಲ’ ಎಂದು ಆಕ್ಷೇಪಿಸಿದರು.

ರಾಜ್ಯ ಸರ್ಕಾರದ ಪರ ಹಾಜರಿದ್ದ ರಾಜ್ಯ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಿ.ಎನ್.ಜಗದೀಶ್ ‘ನ್ಯಾಯಾಲಯ ತನಿಖೆ ನಡೆಸಲು ನಮಗೆ ಅನುಮತಿ ನೀಡಬೇಕು. ನಾವು ಅವರ ವಿರುದ್ಧ ದುರುದ್ದೇಶದ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಭರವಸೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸಬೇಕಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಪ್ರತಿವಾದಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.