ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಅವರು ನಡೆಸಿದ್ದರು ಎನ್ನಲಾದ ಹನಿಟ್ರ್ಯಾಪ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದ ಆರೋಪದ ಅಡಿ ಬಂಧನಕ್ಕೆ ಒಳಗಾಗಿರುವ ಇನ್‌ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಐಡಿಯ ವಿಶೇಷ ತನಿಖಾ ದಳದ(ಎಸ್‌ಐಟಿ) ಪೊಲೀಸರು ಗುರುವಾರ ಐಯಣ್ಣ ಅವರನ್ನು ಬಂಧಿಸಿದ್ದರು.
ಆರೋಪಿಯನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
‘ಹೆಬ್ಬಗೋಡಿ ಠಾಣೆಯ ಇನ್‌ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿ ಕಚೇರಿಯಲ್ಲೇ ಗುರುವಾರ ರಾತ್ರಿ ವಿಚಾರಣೆಗೆ ಒಳಪಡಿಸಲಾಗಿತ್ತು. ಮುನಿರತ್ನ ಅವರು ಎಲ್ಲಿ ಹನಿಟ್ರ್ಯಾಪ್ ನಡೆಸಿದ್ದರು? ಅದರಲ್ಲಿ ಐಯಣ್ಣ ಅವರ ಪಾತ್ರ ಏನು? ಎಂಬುದರ ಕುರಿತು ಪ್ರಶ್ನೆ ಕೇಳಿ ಮಾಹಿತಿ ಪಡೆದುಕೊಳ್ಳಲಾಗಿದೆ. ಕೆಲವು ಮುಖಂಡರಿಗೆ ಆರೋಪಿಗಳು, ಎಚ್ಐವಿ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಆ ಪ್ರಕರಣದಲ್ಲಿ ಆರೋಪಿಯ ಪಾತ್ರದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ’ ಎಂದು ಎಸ್‌ಐಟಿ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.