ನವದೆಹಲಿ: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮತ್ತಿತರ ರಾಷ್ಟ್ರಗಳ ವಲಸಿಗರ ಪತ್ತೆಗೆ ರಾಜ್ಯ ಸರ್ಕಾರವು ಅಗತ್ಯ ಕ್ರಮ ಕೈಗೊಂಡಿದೆ. ಇದುವರೆಗೆ ಅಕ್ರಮ ವಲಸೆಯ 143 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರದ ಗೃಹ ಸಚಿವಾಲಯ ತಿಳಿಸಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕೇಂದ್ರದ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ಇದುವರೆಗೆ ಬಾಂಗ್ಲಾದೇಶದ ಒಟ್ಟು 114 ಅಕ್ರಮ ವಲಸಿಗರನ್ನು ಕರ್ನಾಟಕದಿಂದ ಗಡಿಪಾರು ಮಾಡಲಾಗಿದೆ ಎಂದು ವಿವರಿಸಿದ್ದಾರೆ.
ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಗಡಿಪಾರು ಕೇಂದ್ರ ತೆರೆಯಲು ಕರ್ನಾಟಕ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಅಗತ್ಯ ಸಿಬ್ಬಂದಿ ನೇಮಿಸಿ, ಮೂಲ ಸೌಲಭ್ಯ ಒದಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ಅಕ್ರಮ ವಲಸಿಗರ ಕುರಿತು ಮಾಹಿತಿ ಸಲ್ಲಿಸುವಂತೆ, ಅವರ ಗಡಿಪಾರಿಗೆ ಕ್ರಮ ಕೈಗೊಳ್ಳುವಂತೆ ಎಲ್ಲ ರಾಜ್ಯಗಳು,ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.