ADVERTISEMENT

ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಗೆ ಚಾಲನೆ

ಮೊದಲ ಹಂತದಲ್ಲಿ 833 ಶಾಲೆಗಳಿಗೆ ಪೂರೈಕೆ: ಸಚಿವ ಬೋಸರಾಜು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 15:34 IST
Last Updated 12 ನವೆಂಬರ್ 2024, 15:34 IST
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ತಾಲ್ಲೂಕಿನ ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್ ನೀಡಲಾಯಿತು.  ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್‌, ಸಚಿವರಾದ ಎಚ್.ಸಿ. ಮಹದೇವಪ್ಪ, ಎನ್.ಎಸ್. ಬೋಸರಾಜು ಇದ್ದರು.
-ಪ್ರಜಾವಾಣಿ ಚಿತ್ರ
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ತಾಲ್ಲೂಕಿನ ವರಕೋಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್ ನೀಡಲಾಯಿತು.  ಇಸ್ರೊ ಅಧ್ಯಕ್ಷ ಎಸ್. ಸೋಮನಾಥ್‌, ಸಚಿವರಾದ ಎಚ್.ಸಿ. ಮಹದೇವಪ್ಪ, ಎನ್.ಎಸ್. ಬೋಸರಾಜು ಇದ್ದರು. -ಪ್ರಜಾವಾಣಿ ಚಿತ್ರ   

ಬೆಂಗಳೂರು: ‌ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡುವ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಸಮಾಜ ಕಲ್ಯಾಣ ಇಲಾಖೆಯು ಬಾಬು ಜಗಜೀವನರಾಮ್ ಸಂಶೋಧನಾ ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್. ಬೋಸರಾಜು ಅವರು ಸಾಂಕೇತಿಕವಾಗಿ ಎರಡು ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಿದರು.

ಇದೇ ವೇಳೆ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದ ಇಸ್ರೊ ಅಧ್ಯಕ್ಷ ಸೋಮನಾಥ್, ಬಾಹ್ಯಾಕಾಶಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. 

ADVERTISEMENT

‘ಶಾಲೆಯಲ್ಲಿ ಚೆನ್ನಾಗಿ ಓದುತ್ತಿದ್ದೆ. ಎಂಜಿನಿಯರಿಂಗ್ ಸೇರಿದ ಬಳಿಕ ನನಗೆ ಇಸ್ರೊ ಬಗ್ಗೆ ಗೊತ್ತಾಯಿತು. ಆಸಕ್ತಿ ಹೆಚ್ಚಾದಂತೆ ಬಾಹ್ಯಾಕಾಶಕ್ಕೆ ಸಂಬಂಧಿಸಿ ವಿಷಯಗಳ ಬಗ್ಗೆ ಬೋಧನೆ ಮಾಡುವಂತೆ ಉಪನ್ಯಾಸಕರನ್ನು ಕೇಳಿಕೊಂಡೆ. ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಯೂ ಇಸ್ರೊದಲ್ಲಿ ಕೆಲಸ ಮಾಡಬಹುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಮಕ್ಕಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಟೆಲಿಸ್ಕೋಪ್‌ ನೀಡುವ ಯೋಜನೆ ಬಹಳ ವಿಶೇಷವಾಗಿದ್ದು, ಇದು ಭವಿಷ್ಯದಲ್ಲಿ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ’ ಎಂದು ಹೇಳಿದರು.

ಸಚಿವ ಬೋಸರಾಜು ಮಾತನಾಡಿ, ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಆದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್‌ ಪಾಲ್ಗೊಂಡಿದ್ದರು. 

ಸರ್ಕಾರಿ ಶಾಲೆಯಲ್ಲಿ ಓದಿದರೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು(ಇಸ್ರೊ) ಸೇರಬಹುದು
–ಸೋಮನಾಥ್‌ ಇಸ್ರೊ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.