ಬೆಂಗಳೂರು: ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ನಗರದ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಿಸಲಾಗಿದ್ದು, ಶುಕ್ರವಾರ ರೈಲ್ವೆ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದರು.
ಸಾಮಾನ್ಯ ತಂತ್ರಜ್ಞಾನದಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 6 ತಿಂಗಳು ಬೇಕಾಗುತ್ತದೆ. ಅದನ್ನು 3ಡಿ ತಂತ್ರಜ್ಞಾನದಲ್ಲಿ ಕೇವಲ 45 ದಿನಗಳಲ್ಲಿ ನಿರ್ಮಿಸಲಾಗಿದೆ. ಚೆನ್ನೈ ಐಐಟಿ ಮಾರ್ಗದರ್ಶನದಲ್ಲಿ ಲಾರ್ಸೆನ್ ಮತ್ತು ಟುಬ್ರೋ ಲಿಮಿಟೆಡ್ (ಎಲ್ ಆ್ಯಂಡ್ ಟಿ) ಸಂಸ್ಥೆ ನಿರ್ಮಿಸಿದೆ. ಈ ಕಟ್ಟಡ 1021 ಚದರ ಅಡಿ ಒಟ್ಟು ವಿಸ್ತೀರ್ಣವನ್ನು ಹೊಂದಿದೆ ಎಂದು ಸಚಿವರು ಮಾಹಿತಿ ನೀಡಿದರು.
ಈ ಪ್ರಕ್ರಿಯೆಯು ಪೂರ್ಣ ಸ್ವಯಂ ಚಾಲಿತ ಕಟ್ಟಡ ನಿರ್ಮಾಣ ತಂತ್ರಜ್ಞಾನವಾಗಿದ್ದು, ಇದರಲ್ಲಿ ರೋಬೋಟಿಕ್ ಪ್ರಿಂಟರ್ ಮೂಲಕ ಕಾಂಕ್ರೀಟ್ ಪದರವನ್ನು ಹಂತ ಹಂತವಾಗಿ ನಿರ್ಮಿಸಲಾಗುತ್ತದೆ. ತ್ವರಿತವಾಗಿ ಗಟ್ಟಿಯಾಗುವ ವಿಶೇಷ ದರ್ಜೆಯ ಕಾಂಕ್ರೀಟ್ಅನ್ನು ಪದರಗಳ ನಡುವೆ ಬಂಧವನ್ನು ಖಚಿತಪಡಿಸಿಕೊಳ್ಳಲು ಬಳಸಲಾಗುತ್ತದೆ. ಕಟ್ಟಡ ನಿರ್ಮಾಣದ ವೆಚ್ಚ ಮತ್ತು ಸಮಯ ಉಳಿತಾಯವಾಗುತ್ತದೆ ಎಂದು ಐಐಟಿ ಪ್ರೊಫೆಸರ್ ಆರ್. ಗೆಟ್ಟು ಮಾಹಿತಿ ನೀಡಿದರು.
ಸಂಸದ ಪಿ.ಸಿ. ಮೋಹನ್ ಮಾತನಾಡಿ, ‘ಸಮಯ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಈ ತಂತ್ರಜ್ಞಾನವನ್ನು ಅಂಚೆ ಇಲಾಖೆ ಒಂದೇ ಅಲ್ಲ, ಎಲ್ಲ ಇಲಾಖೆಯವರೂ ಬಳಸಿಕೊಳ್ಳಬೇಕು’ ಎಂದರು.
ಸಂಸದ ಡಿ.ವಿ. ಸದಾನಂದ ಗೌಡ, ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಇದ್ದರು. 3ಡಿ ಮುದ್ರಣದ ವಿಶೇಷ ಅಂಚೆ ಲಕೋಟೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಪ್ರಧಾನಿ ಮೋದಿ ಶ್ಲಾಘನೆ
3ಡಿ ಅಂಚೆ ಕಚೇರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿ ಅವರು ’ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ನೋಡಲು ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುತ್ತಾನೆ. ನಮ್ಮ ರಾಷ್ಟ್ರದ ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ. ಇದು ಸ್ವಾವಲಂಬಿ ಭಾರತದ ಆತ್ಮವನ್ನು ಒಳಗೊಂಡಿದೆ. ಅಂಚೆ ಇಲಾಖೆಯನ್ನು ಪೂರ್ಣಗೊಳಿಸುವಲ್ಲಿ ಶ್ರಮಿಸಿದವರಿಗೆ ಅಭಿನಂದನೆಗಳು’ ಎಂದು ಆ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಎನ್.ಎ. ಹ್ಯಾರಿಸ್ ಅನುಯಾಯಿಗಳ ಪ್ರತಿಭಟನೆ
ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಾಣಗೊಂಡಿರುವ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆಗಾಗಲಿ ವೇಗದೂತ್ ಸಭಾಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮಕ್ಕಾಗಲಿ ಸ್ಥಳೀಯ ಶಾಸಕ ಹ್ಯಾರಿಸ್ ಅವರನ್ನು ಕರೆಯದೇ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಹ್ಯಾರಿಸ್ ಅನುಯಾಯಿಗಳು ಪ್ರತಿಭಟನೆ ನಡೆಸಿದರು. ಕಟ್ಟಡ ನಿರ್ಮಾಣಕ್ಕೆ ಜಾಗ ನೀಡಿರುವವರನ್ನೂ ಕರೆಯದೇ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.