ADVERTISEMENT

ಇಂದಿರಾ ಕ್ಯಾಂಟೀನ್ ಗುಣಮಟ್ಟ ಸುಧಾರಣೆಗೆ ಕ್ರಮ: ಗೌರವ್ ಗುಪ್ತ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 19:03 IST
Last Updated 4 ಫೆಬ್ರುವರಿ 2022, 19:03 IST

ಬೆಂಗಳೂರು: ‘ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ಮತ್ತು ಉಪಾಹಾರಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಇದಕ್ಕೆ ಕಾರಣ ಏನು ಎಂಬುದನ್ನು ಪರಿಶೀಲಿಸಲಾಗುವುದು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದರು.

‘ಪ್ರತಿ ವಾರ್ಡ್‌ಗೆ ಒಂದರಂತೆ ಇಂದಿರಾ ಕ್ಯಾಂಟೀನ್‌ಗಳಿವೆ. ಹಲವು ಸಂಘ–ಸಂಸ್ಥೆಗಳು ಊಟ–ಉಪಾಹಾರ ಪೂರೈಸುತ್ತಿವೆ. ಕ್ಯಾಂಟೀನ್‌ಗೆ ಬರುವ ಜನರ ಸಂಖ್ಯೆ ಕಡಿಮೆಯಾಗಿದೆ ಎಂಬ ಮಾಹಿತಿ ಇದೆ. ಯಾವ ಕಾರಣಕ್ಕೆ ಬೇಡಿಕೆ ಕಡಿಮೆಯಾಗಿದೆ ಎಂಬುದನ್ನು ಪರಿಶೀಲಿಸಲಾಗುವುದು. ಬೇಡಿಕೆ ಪ್ರಮಾಣ ಎಷ್ಟು ಕುಸಿದಿದೆ ಎಂಬುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತೇನೆ. ಗುಣಮಟ್ಟ ಸುಧಾರಣೆಗೆ ಏನು ಮಾಡಬೇಕು ಎಂಬುದನ್ನು ಪರಿಶೀಲಿಸಿ ಮುಂದುವರಿಯಲಾಗುವುದು’ ಎಂದರು.

ರಸ್ತೆ ಅಗೆದರೆ ಎಫ್‌ಐಆರ್: ಬಿಬಿಎಂಪಿ ಅನುಮತಿ ಪಡೆಯದೆ ರಸ್ತೆ ಅಗೆದರೆ ಎಫ್‌ಐಆರ್ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದಿನಿಂದಲೂ ಈ ರೀತಿ ಕ್ರಮವನ್ನು ಪಾಲಿಕೆ ಮಾಡಿಕೊಂಡು ಬಂದಿದೆ. ಎಫ್‌ಐಆರ್ ದಾಖಲಿಸಲು ಪೊಲೀಸ್ ಅಧಿಕಾರಿಗಳ ಸಹಕಾರ ಕೋರಿ ನಗರ ಪೊಲೀಸ್ ಕಮಿಷನರ್ ಅವರಿಗೂ ಪತ್ರ ಬರೆಯಲಾಗಿದೆ ಎಂದು ಹೇಳಿದರು.

ADVERTISEMENT

ಬಿಬಿಎಂಪಿ ಬಜೆಟ್‌ ಸಿದ್ಧಪಡಿಸಲು ತಯಾರಿ ಆರಂಭಿಸಲಾಗುತ್ತಿದೆ. ಬೆಂಗಳೂರು ನಗರದ ಉಸ್ತುವಾರಿ ಮುಖ್ಯಮಂತ್ರಿ ಅವರ ಬಳಿಯೇ ಇದ್ದು, ಹೊಸ ಯೋಜನೆಗಳ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ಉಳಿದ ಜನಪ್ರತಿನಿಧಿಗಳ ಅಭಿಪ್ರಾಯವನ್ನೂ ಸಂಗ್ರಹಿಸಿ ಬಜೆಟ್ ಸಿದ್ಧಪಡಿಸಲಾಗುವುದು ಎಂದು ಗೌರವ್ ಗುಪ್ತ ಸ್ಪಷ್ಟಪಡಿಸಿದರು.

60 ಸಾವಿರ ಲಸಿಕೆ: ಪ್ರತಿನಿತ್ಯ 60 ಸಾವಿರ ತನಕ ಲಸಿಕೆ ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ
ಗಳಲ್ಲಿ ಮತ್ತು ವಿಶೇಷ ಶಿಬಿರಗಳನ್ನು ಏರ್ಪಡಿಸಿ ಲಸಿಕೆ ನೀಡಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.