ADVERTISEMENT

465 ಅಭ್ಯರ್ಥಿಗಳಿಗೆ ಮಾತ್ರ ನೇಮಕಾತಿ ಆದೇಶ

2018ರಲ್ಲಿ ನಡೆದ 1,520 ಕಿರಿಯ ತರಬೇತಿ ಅಧಿಕಾರಿಗಳ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 16:05 IST
Last Updated 1 ಡಿಸೆಂಬರ್ 2022, 16:05 IST

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗೆ ಕೆಪಿಎಸ್‌ಸಿ ಮೂಲಕ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ 503 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡದೇ ಇಲಾಖೆಯ ಆಯುಕ್ತರು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅಭ್ಯರ್ಥಿಗಳು ಆರೋಪಿಸಿದರು.

‘ಕೈಗಾರಿಕಾ ತರಬೇತಿ ಹಾಗೂ ಉದ್ಯೋಗ ಇಲಾಖೆಯ ಐಟಿಐ 23 ಕೇಡರ್‌ಗಳ 1,520 ಕಿರಿಯ ತರಬೇತಿ ಅಧಿಕಾರಿಗಳ ನೇಮಕಾತಿಗಾಗಿ ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) 2018 ಡಿಸೆಂಬರ್‌ 27ರಿಂದ 2019 ಜನವರಿ 3ರವರೆಗೆ ವಿವಿಧ ಕೇಡರ್‌ಗಳಿಗೆ ತಲಾ 400 ಅಂಕಗಳ ಪರೀಕ್ಷೆ ನಡೆದಿತ್ತು. 2021ಸೆಪ್ಟೆಂಬರ್ 23ರಂದು ಅಂತಿಮ ಆಯ್ಕೆ ಪಟ್ಟಿಯಲ್ಲಿ 946 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಅದರಲ್ಲಿ 465ಕ್ಕೂ ಅಭ್ಯರ್ಥಿಗಳಿಗೆ ಈಗಾಗಲೇ ನೇಮಕಾತಿ ಆದೇಶ ನೀಡಲಾಗಿದೆ. ಇನ್ನೂ 503 ಅಭ್ಯರ್ಥಿಗಳಿಗೆ ಅಧಿಕಾರಿಗಳು ನೇಮಕಾತಿ ಆದೇಶ ನೀಡದೇ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ನೊಂದ ಅಭ್ಯರ್ಥಿಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಉತ್ತಮ ಅಂಕ ಪಡೆದ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲೆಗಳನ್ನು ನೀಡಿ ತಮ್ಮ ಕೆಲಸಗಳನ್ನು ಬಿಟ್ಟು, ನೇಮಕಾತಿ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಅಂದು ಎಲ್ಲ ದಾಖಲೆಗಳು ಸರಿಯಾಗಿವೆ ಎಂದು ಪ್ರಮಾಣೀಕರಿಸಿದ್ದರೂ, ಆ ಬಳಿಕ ಸೇವಾನುಭವ ಪ್ರಮಾಣಪತ್ರದಲ್ಲಿ ‘ನಿರ್ದಿಷ್ಟ ಕಾರ್ಯಕ್ಷೇತ್ರದ ಕಾರ್ಯಾನುಭವದಲ್ಲಿ ಸ್ಪಷ್ಟತೆ ಇಲ್ಲ’ ಎಂದು ಕಾರಣ ಹೇಳಿ ನೇಮಕಾತಿ ಆದೇಶ ನೀಡುತ್ತಿಲ್ಲ. ಈ ಬಗ್ಗೆ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸದೆ, ಕಾರ್ಖಾನೆ ಉಪನಿರ್ದೇಶಕರಿಂದ ಸೇವಾನುಭವ ಪತ್ರ ಪರಿಶೀಲನೆಗೆ ಸೂಚಿಸದೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ದೂರಿದರು.

ADVERTISEMENT

‘ವಿವಿಧ ಕೇಡರ್‌ಗಳಲ್ಲಿ ಉತ್ತಮ ಅಂಕಗಳಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಕಡಿಮೆ ರ್‍ಯಾಂಕ್‌ ಪಡೆದ ಅಭ್ಯರ್ಥಿಗಳಿಗೆ ಈಗಾಗಲೇ ಆದೇಶ ಪ್ರತಿ ನೀಡಲಾಗಿದೆ. ಇವರಿಗೆ ಯಾವುದೇ ರೀತಿಯ ಕೌನ್ಸೆಲಿಂಗ್‌ ಮಾಡದೇ ಅಭ್ಯರ್ಥಿಗಳಿಗೆ ಬೇಕಾದ ಸ್ಥಳಗಳಲ್ಲಿ ನಿಯೋಜನೆ ಮಾಡಲಾಗಿದ್ದು, ಇದರಲ್ಲಿ ಅಕ್ರಮ ನಡೆದಿರುವ ಅನುಮಾನವಿದೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಯಾಮರಣಕ್ಕಾಗಿ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅಭ್ಯರ್ಥಿಯೊಬ್ಬರು ತಿಳಿಸಿದರು.

‘400ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಆದೇಶ’
‘ಕಿರಿಯ ತರಬೇತಿ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಲ್ಲಿ(ಕೆಎಟಿ) ಹಲವು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಎಲ್ಲಾ ಪ್ರಕರಣಗಳನ್ನು ನ್ಯಾಯಾಲಯ ಒಂದೇ ಬಾರಿ ಇತ್ಯರ್ಥಗೊಳಿಸಬೇಕು ಎಂದು ಸರ್ಕಾರದ ಮೂಲಕ ಎರೆಡು ದಿನಗಳಲ್ಲಿ ಅರ್ಜಿ ಸಲ್ಲಿಸಲಾಗುವುದು.ಈಗಾಗಲೇ 400ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಎಲ್ಲಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಅಂತಿಮ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗುವುದು’ ಎಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಆಯುಕ್ತೆ ಕೆ. ಜ್ಯೋತಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.