ಬೆಂಗಳೂರು: ರಾಜ್ಯದಾದ್ಯಂತ ಕೈಗಾರಿಕಾ ಪ್ರದೇಶಗಳಿಗೆ ನಿತ್ಯ 29 ಕೋಟಿ ಲೀಟರ್ ನೀರಿನ ಬೇಡಿಕೆ ಇದೆ. ನೀರು ಪೂರೈಕೆಗೆ ಅಗತ್ಯ ವ್ಯವಸ್ಥೆ ಮಾಡದಿದ್ದರೆ ಕೈಗಾರಿಕಾ ಬೆಳವಣಿಗೆಗೆ ಹಿನ್ನಡೆಯಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಜತೆಗೂಡಿ ಕೈಗಾರಿಕಾ ಪ್ರದೇಶಗಳಿಗೆ ನೀರು ಪೂರೈಕೆ ಕುರಿತು ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆ, ಬೆಂಗಳೂರು ಜಲ ಮಂಡಳಿ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗಳ ಅಧಿಕಾರಿಗಳ ಸಭೆಯನ್ನು ಸೋಮವಾರ ನಡೆಸಿದ ಅವರು, ಕೈಗಾರಿಕಾ ಪ್ರದೇಶಗಳ ನೀರಿನ ಬೇಡಿಕೆ ಈಡೇರಿಸಲು ಯೋಜನೆ ರೂಪಿಸುವಂತೆ ಸೂಚಿಸಿದರು.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳ ಕೈಗಾರಿಕಾ ಪ್ರದೇಶಗಳು ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿವೆ. ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ 4.5 ಕೋಟಿ ಲೀಟರ್‌ಗಳಷ್ಟು ಕುಡಿಯುವ ನೀರು ಅಗತ್ಯವಿದೆ. ಇದನ್ನು ಹಿಡಕಲ್ ಜಲಾಶಯದಿಂದ ಪೂರೈಸಬಹುದು. ವಿಜಯಪುರ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಜಲಾಶಯದಿಂದ ನಿತ್ಯವೂ ಇಷ್ಟೇ ಪ್ರಮಾಣದ ಕುಡಿಯುವ ನೀರು ಪೂರೈಸಬೇಕಾಗಿದೆ ಎಂದರು.
ಕಲಬುರಗಿ ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ಮತ್ತು ಭೀಮಾ ನದಿಗಳಿಂದ ದಿನವೂ 70 ಲಕ್ಷ ಲೀಟರ್, ಬಳ್ಳಾರಿ ಕೈಗಾರಿಕಾ ಪ್ರದೇಶಕ್ಕೆ ತುಂಗಭದ್ರಾ ಅಣೆಕಟ್ಟೆಯಿಂದ 1.3 ಕೋಟಿ ಲೀಟರ್, ರಾಯಚೂರು ಕೈಗಾರಿಕಾ ಪ್ರದೇಶಕ್ಕೆ ಕೃಷ್ಣಾ ನದಿಯಿಂದ 1.3 ಕೋಟಿ ಲೀಟರ್ ಕುಡಿಯುವ ನೀರು ಅಗತ್ಯವಿದೆ ಎಂದು ವಿವರಿಸಿದರು.
ಹಳೆ ಮೈಸೂರು ಭಾಗದಲ್ಲಿರುವ ತುಮಕೂರು, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಕೈಗಾರಿಕಾ ಉದ್ದೇಶಕ್ಕೆ ಮರು ಬಳಕೆ ಮಾಡಲಾಗುತ್ತಿದೆ. ಆದರೆ, ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ನೀರಿನ ಲಭ್ಯತೆಯನ್ನು ಗುರುತಿಸಿ ಪೂರೈಕೆಗೆ ಯೋಜನೆ ರೂಪಿಸಬೇಕು. ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.