ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನ ಉಪ ವಿಭಾಗದ ಸುಂಕೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿರುವ ಶೃಂಗೇರಿ ಮಠದ ಜ್ಞಾನೋದಯ ಶಾಲೆ ಮತ್ತು ಪದವಿಪೂರ್ವ ಕಾಲೇಜು ಕಟ್ಟಡದ ಅನಧಿಕೃತ ಭಾಗ ತೆರವುಗೊಳಿಸುವ ಆದೇಶಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತರು ತಡೆಯಾಜ್ಞೆ ನೀಡಿದ್ದಾರೆ.
ಶೃಂಗೇರಿ ಮಠದ ಅಡಿಯಲ್ಲಿ ಕಾರ್ಯನಿರ್ವಹಿಸುವ ಈ ಸಂಸ್ಥೆಯ ಕಟ್ಟಡವನ್ನು ನಿಯಮಬಾಹಿರವಾಗಿ ನಿರ್ಮಿಸಲಾಗಿದೆ ಎಂದು ದೂರು ಬಂದಿದ್ದರಿಂದ ಧರ್ಮರಾಯಸ್ವಾಮಿ ದೇವಸ್ಥಾನ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರಿಶೀಲನೆ ಮಾಡಿ ವರದಿ ನೀಡಿದ್ದರು. ಈ ವರದಿಯ ಆಧಾರದಲ್ಲಿ ಕಟ್ಟಡದ ಅನಧಿಕೃತ ಭಾಗಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಚಿಕ್ಕಪೇಟೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಧರ್ಮರಾಯಸ್ವಾಮಿ ದೇವಸ್ಥಾನ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸೂಚಿಸಿದ್ದರು.
ನ.11ರಂದು ಕಟ್ಟಡದ ಅನಧಿಕೃತ ಭಾಗ ತೆರವುಗೊಳಿಸಲು ತೀರ್ಮಾನಿಸಿ ಪೊಲೀಸ್ ಬಂದೋಬಸ್ತ್ ಒದಗಿಸಲು ಶಂಕರಪುರ ಪೊಲೀಸ್ ಠಾಣೆಗೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪತ್ರ ಬರೆದಿದ್ದರು. ಕಟ್ಟಡದ ಅನಧಿಕೃತ ಭಾಗಗಳನ್ನು ತೆರವುಗೊಳಿಸಲು ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿತ್ತು.
ಈ ಮಧ್ಯೆ ಜ್ಞಾನೋದಯ ಶಾಲೆ ಮತ್ತು ಪಿಯು ಕಾಲೇಜಿನ ಅರ್ಜಿಯ ಆಡಳಿತ ಮಂಡಳಿಯು ಬಿಬಿಎಂಪಿ ಮುಖ್ಯ ಆಯುಕ್ತರ ನ್ಯಾಯಾಲಯದಲ್ಲಿ ಬುಧವಾರ ಮೇಲ್ಮನವಿ ಸಲ್ಲಿಸಿತ್ತು. ಬುಧವಾರವೇ ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ಹೊರಡಿಸಿದ್ದಾರೆ. ಸಂಸ್ಥೆಯ ಅರ್ಜಿಯ ವಿಚಾರಣೆಯನ್ನು ತ್ವರಿತವಾಗಿ ನಿಗದಿಪಡಿಸುವಂತೆಯೂ ಆದೇಶದಲ್ಲಿ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.