ADVERTISEMENT

ಶಿಕ್ಷಕರ ಕ್ಷೇತ್ರ | ಮತದಾರರ ನೋಂದಣಿ ವಿಳಂಬ: ಮುಖ್ಯ ಚುನಾವಣಾಧಿಕಾರಿಗೆ ದೂರು

​ಪ್ರಜಾವಾಣಿ ವಾರ್ತೆ
Published 14 ಜನವರಿ 2024, 16:21 IST
Last Updated 14 ಜನವರಿ 2024, 16:21 IST
<div class="paragraphs"><p>ಮತದಾನ( ಸಾಂದರ್ಭಿಕ ಚಿತ್ರ)</p></div>

ಮತದಾನ( ಸಾಂದರ್ಭಿಕ ಚಿತ್ರ)

   

ಬೆಂಗಳೂರು: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಿಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಅಧಿಕಾರಿಗಳು ಬಾಕಿ ಇರಿಸಿಕೊಂಡು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ ಮುಖಂಡ, ವಕೀಲ ಎ.ಪಿ. ರಂಗನಾಥ್‌ ರಾಜ್ಯದ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ಶುಕ್ರವಾರ ದೂರು ಸಲ್ಲಿಸಿರುವ ಅವರು, ‘ಕೆಲವು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಮತ್ತು ಬಿಬಿಎಂಪಿ ಅಧಿಕಾರಿಗಳು ವಿವಿಧ ಶಿಕ್ಷಣ ಸಂಸ್ಥೆಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಅವುಗಳನ್ನು ಆಯಾ ಪ್ರದೇಶದ ಹೆಚ್ಚುವರಿ ಮತದಾರರ ನೋಂದಣಿ ಅಧಿಕಾರಿಗಳಿಗೆ ಕಳುಹಿಸಿಲ್ಲ’ ಎಂದು ದೂರಿದ್ದಾರೆ.

ADVERTISEMENT

ಕೆಲವು ಶಾಲೆ, ಪದವಿಪೂರ್ವ ಕಾಲೇಜುಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಸಲ್ಲಿಸಿರುವ ಮತದಾರರ ನೋಂದಣಿ ಅರ್ಜಿಗಳು ಅಧಿಕಾರಿಗಳ ಬಳಿಯೇ ಉಳಿದಿವೆ. ಶಿಕ್ಷಕರು ತಮ್ಮ ಅರ್ಜಿಗಳನ್ನು ವರ್ಗಾಯಿಸುವಂತೆ ಮಾಡಿದ ಮನವಿಗಳಿಗೂ ಸ್ಪಂದಿಸುತ್ತಿಲ್ಲ. ಇದರಿಂದ ಮತದಾರರ ಪಟ್ಟಿಗೆ ಸೇರಲು ಅರ್ಹರಾಗಿರುವವರಿಗೆ ಅನ್ಯಾಯವಾಗಲಿದೆ ಎಂದು ಹೇಳಿದ್ದಾರೆ.

‘ಸ್ಥಳೀಯ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದಿದ್ದರೂ, ಸಮಸ್ಯೆಗೆ ಪರಿಹಾರ ಒದಗಿಸಿಲ್ಲ. ಆದ್ದರಿಂದ, ತಾವು ತಕ್ಷಣ ಮಧ್ಯ ಪ್ರವೇಶಿಸಿ ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸಿ, ಮತದಾರರ ನೋಂದಣಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಚುನಾವಣಾಧಿಕಾರಿಯವರನ್ನು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.